ಬೆಂಗಳೂರು: ಸಾರ್ವಜನಿಕರಿಗೆ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಕರ್ತವ್ಯದಲ್ಲಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ಗೆ ನಿಂದಿಸಿದ ಆರೋಪದಡಿ ಬಂಧನ ಭೀತಿ ಎದುರಿಸುತ್ತಿರುವ ಮಂಡ್ಯ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ವಿಜಯ್ ಕುಮಾರ್ಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಷರತ್ತುಗಳನ್ನು ವಿಧಿಸಿ, ನಿರೀಕ್ಷಣಾ ಜಾಮೀನು ನೀಡಿದೆ. 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು, ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರಬಾರದು, ತನಿಖೆಗೆ ಸಹಕರಿಸಬೇಕು, ತಿಂಗಳಿಗೊಮ್ಮೆ ತನಿಖಾಧಿಕಾರಿ ಎದುರು ಹಾಜರಾಗಿ ಸಹಿ ಹಾಕಬೇಕು. ದೋಷಾರೋಪ ಪಟ್ಟಿ ಸಲ್ಲಿಸುವವರೆಗೂ ಅನುಮತಿ ಇಲ್ಲದೆ ಠಾಣೆ ಸರಹದ್ದು ಬಿಟ್ಟು ಹೊರ ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.
ಪ್ರಕರಣದ ಹಿನ್ನೆಲೆ:
ಕಳೆದ ತಿಂಗಳು ಮೇ 5ರ ಸಂಜೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಪ್ರೊಬೇಷನರಿ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೊರೊನಾ ಸೋಂಕಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕರ್ತವ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಕಾರಿನಲ್ಲಿ ಬಂದಿದ್ದ ವಿಜಯ್ ಕುಮಾರ್ ಅವರನ್ನು ಪೊಲೀಸರು ತಡೆದಾಗ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆದಿತ್ತು.
ಈ ವೇಳೆ ವಿಜಯ್ ಕುಮಾರ್ ಮಹಿಳಾ ಪಿಎಸ್ಐಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂಬ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಬಂಧನ ಭೀತಿಗೆ ಒಳಗಾಗಿ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.