ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಕ್ಷೇತ್ರಗಳ ಪುನರ್‌ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ. ಕ್ಷೇತ್ರ ಪುನರ್ ವಿಂಗಡಣೆ ಸಂಬಂಧ ಗೊಂದಲಗಳಿದ್ದು, ಈ ಸಂಬಂಧ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಮಂಜುನಾಥ್ ರೆಡ್ಡಿ ಸೇರಿದಂತೆ ಮತ್ತಿತರರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಎಂ.ಜೆ.ಎಸ್ ಕಮಲ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹಾಜರಾಗಿದ್ದ ರಾಜ್ಯ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಬಿಬಿಎಂಪಿಗೆ ಚುನಾವಣೆ ನಡೆಸುವುದು ತುರ್ತು ಅತ್ಯಗತ್ಯವಿದೆ. ಆದರೆ, ಈ ಹಿಂದೆ ನಡೆಸಿರುವ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಹಲವು ಲೋಪಗಳಿದ್ದು, ಹೊಸದಾಗಿ ವಾರ್ಡ್ಗಳ ಪುನರ್ವಿಂಗಡಣೆ ಅನಿವಾರ್ಯವಿದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಅಲ್ಲದೆ, ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಹಲವು ಲೋಪಗಳಿವೆ. ಅವುಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಹೀಗಾಗಿ ಮತ್ತಷ್ಟು ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಅರ್ಜಿ ದಾರರ ಪರ ವಕೀಲರು ವಾದ ಮಂಡಿಸಿ, ಕೆಲ ವಾರ್ಡ್ಗಳ ಮತದಾರರನ್ನು ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ವಿಭಜನೆ ಮಾಡಿದ್ದಾರೆ. ಇದರಿಂದಾಗಿ ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಲಿದೆ. ಹೀಗಾಗಿ ಅಧಿಸೂಚನೆ ರದ್ದು ಪಡಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ, ಮುಂದಿನ 12 ವಾರಗಳಲ್ಲಿ ಕ್ಷೇತ್ರ ಪುನರ್ವಿಂಗಡಣೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 2020ರ ಸೆಪ್ಟೆಂಬರ್‌ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಜ್ಯ ಸರ್ಕಾರವು ತಡೆಯಾಜ್ಞೆ ಪಡೆದಿತ್ತು. ಈ ನಡುವೆ ಪ್ರಕರಣವೊಂದರ ವಿಚಾರಣೆ ವೇಳೆ ದೇಶದೆಲ್ಲೆಡೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ವಿಳಂಬ ಮಾಡದೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.
ಆ ಬಳಿಕ ಸರ್ಕಾರ ಮೀಸಲು ಅಧಿಸೂಚನೆ ಮತ್ತು ವಾರ್ಡ್ ಪುನರ್ ವಿಂಗಡಣೆ ಮಾಡಿತ್ತು. ಇದರಲ್ಲಿದ್ದ ದೋಷಗಳನ್ನು ಪ್ರಶ್ನಿಸಿ ಹಲವು ಅರ್ಜಿಗಳು ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದವು. ಅಲ್ಲದೇ, ಬಿಬಿಎಂಪಿ ಚುನಾವಣೆಗೆ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಮೀಸಲಾತಿ ಅಧಿಸೂಚನೆಯಲ್ಲಿ ನಿಯಮ ಪಾಲನೆಯಾಗಿಲ್ಲ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಭಕ್ತವತ್ಸಲ ಸಮಿತಿ ನೀಡಿರುವ ವರದಿ ಆಧರಿಸಿ ಮೀಸಲು ಕಲ್ಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಆದರೆ, ಕೃಷ್ಣಮೂರ್ತಿ ಹಾಗೂ ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೇಳಿರುವ ಮೂರು ಹಂತದ ಪರಿಶೀಲನೆ (ಟ್ರಿಪಲ್ ಟೆಸ್ಟ್) ಅನ್ನು ಭಕ್ತವತ್ಸಲ ಸಮಿತಿ ಅನ್ವಯಿಸಿಕೊಂಡಿಲ್ಲ. ಸರ್ಕಾರ ಸಹ ಮೀಸಲು ಕಲ್ಪಿಸುವಾಗ ಟ್ರಿಪಲ್ ಟೆಸ್ಟ್ ಪರಿಗಣಿಸಿಲ್ಲ. ಯಾವ ಜಾತಿಗಳಿಗೆ ರಾಜಕೀಯ ಪ್ರಾತಿನಿಧ್ಯವಿಲ್ಲವೋ ಅಂತಹ ಜಾತಿಗಳಿಗೆ ಮೀಸಲು ಕಲ್ಪಿಸಬೇಕಾಗುತ್ತದೆ. ಬಿಬಿಎಂಪಿ ವಾರ್ಡ್ ಮೀಸಲು ನಿಗದಿಯಲ್ಲಿ ನಿಯಮ ಪಾಲನೆಯಾಗಿಲ್ಲ. ಭಕ್ತವತ್ಸಲ ಸಮಿತಿ ಸಹ ಸೂಕ್ತ ವಿಧಾನ ಅನುಸರಿಸಿಲ್ಲ. ಇದುವರೆಗೆ ಯಾವ ಯಾವ ಜಾತಿಗಳಿಗೆ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂಬ ಪಟ್ಟಿ ಒದಗಿಸಿಲ್ಲ. ಆದ್ದರಿಂದ, ಬಿಬಿಎಂಪಿ ವಾರ್ಡ್‌ವಾರು ಮೀಸಲು ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಬಿಬಿಎಂಪಿ ಚುನಾವಣೆಗೆ ಸರ್ಕಾರ ವಾರ್ಡ್ ವಾರು ನಿಗದಿಪಡಿಸಿ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಡಿಸೆಂಬರ್ 31ರ ಅಂತ್ಯದ ವೇಳೆಗೆ ಪಾಲಿಕೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ : ಮುರುಘಾ ಶರಣರ ಜಾಮೀನು ಅರ್ಜಿ: ರೋಸ್ಟರ್ ಪ್ರಕಾರ ವಿಚಾರಣೆಗೆ ನಿಗದಿ ಮಾಡಲು ಹೈಕೋರ್ಟ್ ಸೂಚನೆ