ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಪ್ರಕಿಯೆ ಪೂರ್ಣ ಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅವಧಿ ಮುಗಿದ ಜಿಪಂ ಮತ್ತು ತಾಪಂಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾಪಂ, ಜಿಪಂ ಕ್ಷೇತ್ರ ಮರುವಿಂಗಡಣೆ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿತ್ತು.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಿಧಾನಸಭೆ ಚುನಾವಣೆ ಮುಗಿದು, ಈಗಷ್ಟೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವರಿಗೆ ಖಾತೆಗಳ ಹಂಚಿಕೆಯಾಗಿದ್ದು, ಜಿಪಂ ತಾಪಂ ಚುನಾವಣೆಗೆ ಸಂಬಂಧಿಸಿದ ಇಲಾಖೆಯ ಸಚಿವರು ಈಗಷ್ಟೇ ಅಧಿಕಾರವಹಿಸಿಕೊಂಡಿದ್ದಾರೆ.
ಜಿಪಂ, ತಾಪಂ ಚುನಾವಣೆ, ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದರು. ಅಡ್ವೋಕೇಟ್ ಜನರಲ್ ಅವರ ಈ ಮನವಿಗೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲರೂ ಸಹ ಸಹಮತ ವ್ಯಕ್ತಪಡಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ನಾಲ್ಕು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.
ಇದನ್ನೂ ಓದಿ: ಇಂದಿನಿಂದ ಶೈಕ್ಷಣಿಕ ವರ್ಷಾರಂಭ: 31 ರಂದು ಶಾಲೆಗಳು ಆರಂಭ..!
ರಾಜ್ಯದಲ್ಲಿ ಜಿ.ಪಂ. ತಾ.ಪಂ. ಚುನಾವಣೆ ನಡೆಸಲು ಒಂದಿಲ್ಲ ಒಂದು ಸಬೂಬು ಹೇಳುತ್ತಾ ಬಂದಿದ್ದ ಸರ್ಕಾರಕ್ಕೆ ಚಾಟಿ ಬೀಸಿದ್ದ ಹೈಕೋರ್ಟ್ 5 ಲಕ್ಷ ರೂ. ದಂಡ ಸಹ ವಿಧಿಸಿತ್ತು. ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 2023ರ ಫೆಬ್ರವರಿ 1ರೊಳಗೆ ಮುಗಿಸಬೇಕು ಎಂದು ತಾಕೀತು ಮಾಡಿ ಹೈಕೋರ್ಟ್ 2022ರ ಡಿ.14ರಂದು ಆದೇಶ ಹೊರಡಿಸಿತ್ತು. ಮತ್ತೇ ಕಾಲಾವಕಾಶ ಕೇಳಿದ್ದ ಸರ್ಕಾರ ಕೊನೆಗೂ ಮಾ.1ರಂದು ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಹೊರಡಿಸಿತ್ತು. ಈ ಮಧ್ಯೆ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಮುಂದಿನ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು.
ಇದನ್ನೂ ಓದಿ: ಪ್ರವಾಸಕ್ಕೆ ತೆರಳಿದ್ದ ಮೂರು ಕುಟುಂಬಗಳ ಬದುಕಿನ ಪಯಣ ಅಂತ್ಯ: ಮೈಸೂರು ಭೀಕರ ಅಪಘಾತದ ಕೊನೆ ಕ್ಷಣದ ವಿಡಿಯೋ!