ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 12 ವಾರ ಕಾಲಾವಕಾಶ ನೀಡಿದೆ.
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿಗಂಡಣೆ ಮತ್ತು ಮೀಸಲು ನಿಗದಿ ಕೆಲಸವನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಹೈಕೋರ್ಟ್ ಆದೇಶಿಸಿತ್ತು.
ಆದರೆ, ಕ್ಷೇತ್ರ ಮರು ವಿಂಗಡಣೆ ಕೆಲಸ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ಮತ್ತೆ ಮೂರು ವಾರ ಕಾಲಾವಕಾಶ ಪಡೆಯುವಂತೆ ಮರು ವಿಂಗಡಣೆ ಆಯೋಗವು ಸರ್ಕಾರಕ್ಕೆ ಸೆ.9ರಂದು ಪತ್ರ ಬರೆದಿದೆ. ತದನಂತರ ಮೀಸಲು ನಿಗದಿ ಕಾರ್ಯವನ್ನು ಸರ್ಕಾರ ಮಾಡಬಹುದಾಗಿದೆ ಎಂಬುದಾಗಿ ತಿಳಿಸಿದೆ. ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲು ನಿಗದಿಯನ್ನು ಶೀಘ್ರ ಪೂರ್ಣಗೊಳಿಸಲು ಸರ್ಕಾರ ಸಹ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆದ್ದರಿಂದ 12 ವಾರ ಕಾಲಾವಕಾಶ ನೀಡಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು.
ಇದನ್ನು ಪುರಸ್ಕರಿಸಿದ ನ್ಯಾಯಪೀಠ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಇತರೆ ವರ್ಗಗಗಳಿಗೆ ಮೀಸಲು ಕಲ್ಪಿಸುವ ಮತ್ತು ಕ್ಷೇತ್ರ ಮರು ವಿಂಗಡಣೆ ಕಾರ್ಯವನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಅರ್ಜಿ ಇತ್ಯರ್ಥಪಡಿಸಿತು.
(ಓದಿ: ಕಾರಣವಿಲ್ಲದೆ ಟ್ವಿಟರ್ ಖಾತೆ ರದ್ದುಪಡಿಸುವುದು ಎಷ್ಟು ಸರಿ: ಹೈಕೋರ್ಟ್ನಲ್ಲಿ ಟ್ವಿಟರ್ ಪ್ರಶ್ನೆ )