ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಡಿವೈಎಸ್‌ಪಿ, ಎಎಸ್‌ಐ ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಹೈಕೋರ್ಟ್ 2 ತಿಂಗಳು ಕಾಲಾವಕಾಶ ನೀಡಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಒಟ್ಟು 2,868 ಡಿವೈಎಸ್‌ಪಿ, ಎಎಸ್‌ಐ ಹಾಗೂ ಹೆಡ್‌ಕಾನ್ಸ್‌ಟೇಬಲ್ ಹುದ್ದೆಗಳನ್ನು ಮುಂಬಡ್ತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಹೀಗಾಗಿ ಇದಕ್ಕೆ 2 ತಿಂಗಳು ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.
ಸರ್ಕಾರಿ ವಕೀಲರ ಮನವಿ ಆಲಿಸಿದ ನ್ಯಾಯಾಲಯ, ಮುಂದಿನ ವಿಚಾರಣೆಯೊಳಗೆ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ವರದಿ ನೀಡಲು ಸೂಚಿಸಿ ವಿಚಾರಣೆಯನ್ನು ಡಿಸೆಂಬರ್ 10ಕ್ಕೆ ಮುಂದೂಡಿದೆ.