ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೊರೊನಾ ಮಾರ್ಗಸೂಚಿಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿ ಮಾಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗಿಯ ಪೀಠ ಈ ನಿರ್ದೇಶನ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ರಾಜಕಾರಣಿಗಳೆ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಜನರು ಕೂಡ ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ನಿರ್ವಹಿಸುತ್ತಿಲ್ಲ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರಾಜ್ಯದಲ್ಲಿ ನಿತ್ಯವೂ ಎಂಟರಿಂದ ಹತ್ತು ಸಾವಿರ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕೊರೊನಾ ತಡೆಯಬೇಕಿದ್ದರೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ. ಈ ಸಂಬಂಧ ನ್ಯಾಯಾಲಯ ನೀಡಿರುವ ಆದೇಶಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಸರಿಯಾಗಿ ಪಾಲನೆ ಮಾಡಿರುವಂತೆ ಕಾಣುವುದಿಲ್ಲ. ಹೀಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊರೊನಾ ನಿಯಂತ್ರಣ ಸಂಬಂಧ ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲನೆ ಮಾಡಿರುವ ಕುರಿತು ವರದಿ ಸಲ್ಲಿಸಬೇಕು.
ಹಾಗೆಯೇ ನಗರದಲ್ಲಿ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಓಡಾಡುತ್ತಿರುವವರ ವಿರುದ್ಧ ಕೈಗೊಂಡಿರುವ ಕ್ರಮಗಳೇನು. ಅವರಿಗೆ ಎಷ್ಟು ದಂಡ ವಿಧಿಸಲಾಗುತ್ತದೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.