ಬೆಂಗಳೂರು : ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ಹೆಚ್ ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್ ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಮೂವರು ಸಚಿವಾಕಾಂಕ್ಷಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಮೂವರು ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡದಂತೆ ರಾಜ್ಯಪಾಲರು ಹಾಗೂ ಸಿಎಂಗೆ ನಿರ್ದೇಶಿಸಬೇಕು ಎಂದು ಕೋರಿ ನಗರದ ಎ ಎಸ್ ಹರೀಶ್ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಾದಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿಯನ್ನು ಶೀಘ್ರವಾಗಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಪರಿಷತ್ತಿಗೆ ಮೂವರನ್ನು ಆಯ್ಕೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿದಾರರು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಅದರೊಟ್ಟಿಗೆ ಅಕ್ಟೋಬರ್ 5ರಂದು ವಿಚಾರಣೆ ನಡೆಸಲಾಗುವುದು. ಇನ್ನು ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸಬೇಕಾಗಿದೆ ಎಂದು ತಿಳಿಸಿತು. ಅಲ್ಲದೇ ಆರ್ ಶಂಕರ್ ಎಂಟಿಬಿ ನಾಗರಾಜ್ ಹಾಗೂ ಹೆಚ್ ವಿಶ್ವನಾಥ್ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ:
ಮೂವರು ಸಚಿವಾಕಾಂಕ್ಷಿಗಳು ವಿಧಾನಪರಿಷತ್ತಿಗೆ ಆಯ್ಕೆಯಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬಾರದು. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಇವರು ಸಚಿವರಾಗಬೇಕಿದ್ದಲ್ಲಿ ಚುನಾವಣೆಯಲ್ಲಿ ಗೆಲ್ಲಬೇಕಿತ್ತು. ಹೀಗಾಗಿ ವಿಧಾನಪರಿಷತ್ತಿಗೆ ಪ್ರವೇಶಿಸುವುದನ್ನು ಮರು ಆಯ್ಕೆ ಎಂದು ಪರಿಗಣಿಸಲಾಗದು. ಒಂದು ವೇಳೆ ಈ ಮೂವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆಯಾಗಲಿದೆ. ಆದ್ದರಿಂದ ಈ ಮೂವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.