ಬೆಂಗಳೂರು: ವಿಪತ್ತು ನಿರ್ವಹಣೆಯಲ್ಲಿ ಹೆಚ್ಚಿನ ಅಧಿಕಾರ ಹೊಂದಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಗಳನ್ನೇ ನಡೆಸದೆ ಹೇಗೆ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಬಗ್ಗೆ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದೆ.
ಈ ಕುರಿತಂತೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಎ. ಮಲ್ಲಿಕಾರ್ಜುನ್ ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರಿ ವಕೀಲರನ್ನು ಪ್ರಶ್ನಿಸಿದ ಪೀಠ, ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ವೈದ್ಯಕೀಯ ನೆರವು, ಪುನರ್ವಸತಿ, ಪರಿಹಾರ ಕಲ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಹೆಚ್ಚಿನ ಅಧಿಕಾರ ಹೊಂದಿವೆ. ಆದರೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಸರಿಯಾಗಿ ಸಭೆಯನ್ನೇ ನಡೆಸಿಲ್ಲ. ಸಭೆಗಳನ್ನೇ ನಡೆಸದೆ ಉತ್ತಮ ತೀರ್ಮಾನ ತೆಗೆದುಕೊಳ್ಳಲು ಹೇಗೆ ಸಾಧ್ಯ ಅಸಮಾಧಾನ ವ್ಯಕ್ತಪಡಿಸಿತು.
ಇದಕ್ಕೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಉತ್ತರಿಸಿ, ಸಭೆ ನಡೆಯದೇ ಇರಬಹುದು. ಆದರೆ, ಪ್ರಾಧಿಕಾರಗಳ ಕಾರ್ಯ ನಿರ್ವಹಣೆಗೆ ಯಾವುದೇ ಅಡ್ಡಿಯಾಗಿಲ್ಲ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಕೆಲಸಗಳು ಸರಾಗವಾಗಿ ನಡೆಯುತ್ತಿವೆ ಎಂದು ಸ್ಪಷ್ಟನೆ ನೀಡಲು ಪ್ರಯತ್ನಿಸಿದರು. ವಾದ ಒಪ್ಪದ ಪೀಠ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ತುರ್ತು ಪರಿಸ್ಥಿತಿಗಳಲ್ಲಿ ಅಧಿಕಾರ ಚಲಾಯಿಸಿ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಅವರು ತೆಗೆದುಕೊಳ್ಳುವ ನಿರ್ಧಾರಗಳು ಸುಧಾರಿತವಾಗಿರಬೇಕು.
ಸಭೆ ನಡೆಸಿದರಷ್ಟೇ ಉತ್ತಮ ನಿರ್ಧಾರ ಕೈಗೊಳ್ಳಬಹುದು. ಆದರೆ ಸಭೆಗಳೇ ನಡೆದಿಲ್ಲ. ಮುಖ್ಯವಾಗಿ ಸರ್ಕಾರ ಆಕ್ಷೇಪಣೆ ಸಲ್ಲಿಸಿರುವಂತೆ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಯಾವುದೇ ಸಭೆ ನಡೆಸಿಲ್ಲ. ಕೊರೊನಾ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಸಭೆಗಳನ್ನು ಮಾತ್ರ ನಡೆಸಲಾಗಿದೆ. ಹೀಗಾದರೆ ಪ್ರಾಧಿಕಾರಗಳು ತಮ್ಮ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಚಲಾಯಿಸಲು ಸಾಧ್ಯವಿಲ್ಲ. ಹಾಗೆಯೇ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಪೀಠ ತಾಕೀತು ಮಾಡಿತು.
ಅದೇ ರೀತಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರಾದ ಮುಖ್ಯ ಕಾರ್ಯದರ್ಶಿ ಕೂಡ ಹಲವು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಸಭೆ ನಡೆಸದೇ ಹೀಗೆ ತೀರ್ಮಾನ ತೆಗೆದುಕೊಂಡರೆ ಅನುಷ್ಠಾನದಲ್ಲಿ ಸಮಸ್ಯೆಗಳು, ಅಡಚಣೆಗಳು ಉಂಟಾಗುತ್ತವೆ. ಆದ್ದರಿಂದ ಸರ್ಕಾರ ಇತ್ತ ಗಮನ ಹರಿಸಿ, ಮುಂದಿನ ವಿಚಾರಣೆ ವೇಳೆ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.