ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಆದೇಶವನ್ನು ಹೈಕೋರ್ಟ್ ಏ.6 ರ ವರೆಗೆ ವಿಸ್ತರಿಸಿದೆ. ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠ ತಡೆಯಾಜ್ಞೆ ವಿಸ್ತರಿಸಿದೆ. ಜೊತೆಗೆ, ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿರುವ ಮತ್ತೊಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರಿಗೆ ಏ.6 ರವರೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ಇದಕ್ಕೂ ಮುನ್ನ ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಅರ್ಜಿದಾರರ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವು ಕೋರಿ ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ತ್ವರಿತವಾಗಿ ಪರಿಗಣಿಸಬೇಕು ಎಂದು ಕೋರಿದರು. ರಾಜ್ಯ ಸರ್ಕಾರಿ ವಕೀಲರು, ಸಿಬಿಐ ತನಿಖೆಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿರುವ ಶಿವಕುಮಾರ್ ಅವರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕಿದೆ. ಸದ್ಯ ವಿಧಾನಸಭೆಗೆ ಚುನಾವಣೆ ಬೇರೆ ಘೋಷಣೆಯಾಗಿದೆ. ಈ ಸಮಯದಲ್ಲಿ ಅಧಿಕಾರಿ ವರ್ಗ ಲಭ್ಯವಾಗುವುದು ಕಷ್ಟ. ಹಾಗಾಗಿ, ಆಕ್ಷೇಪಣೆ ಸಲ್ಲಿಸಲು ಕನಿಷ್ಠ ನಾಲ್ಕು ವಾರ ಸಮಯ ನೀಡಬೇಕು ಎಂದು ಕೋರಿದರು.
ಅದಕ್ಕೆ ಒಪ್ಪದ ನ್ಯಾಯಪೀಠ, ಸರ್ಕಾರ ಯಾವಾಗಲೂ ಸಮಯ ಕೇಳುತ್ತದೆ. ಸಿಬಿಐ ನೋಡಿದರೆ ಬೇಗ ವಿಚಾರಣೆ ನಡೆಸುವಂತೆ ಕೋರುತ್ತಿದೆ. ನಿಮಗೆ ಏಕೆ ಸಮಯ ಕೊಡಬೇಕು ಎಂದು ಪ್ರಶ್ನಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿತು. ಅಂತಿಮವಾಗಿ ಆಕ್ಷೇಪಣೆ ಸಲ್ಲಿಸಲು ಏ.6ರವರೆಗೆ ಕಾಲಾವಾಶ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು?: ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ತನಿಖೆಗೆ 2022ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ನಡುವೆ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿನ್ನು ಇದೇ ಪೀಠಕ್ಕೆ ವರ್ಗಾವಣೆ ಮಾಡಲಾಗಿದ್ದು, ಎರಡೂ ಅರ್ಜಿಗಳನ್ನು ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ