ಬೆಂಗಳೂರು: ರಾಜ್ಯದಲ್ಲಿನ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆಗೆ ಸಂಬಂಧಿಸಿದಂತೆ ಅಂಗನವಾಡಿ ಕೇಂದ್ರಗಳ ಸುಧಾರಣೆ ಹಾಗೂ ಅಭಿವೃದ್ಧಿಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದಕ್ಕೆ ಸಂಬಂಧಿಸಿದ ವರದಿ ನೀಡುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಓದಿ: ನಟ ಜಗ್ಗೇಶ್ ಸೇರಿ 10 ಮಂದಿ ಬಿಜೆಪಿ ವಕ್ತಾರರಾಗಿ ನೇಮಕ.. ಗಣೇಶ್ ಕಾರ್ಣಿಕ್ಗೆ ಬಡ್ತಿ
ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿಯ ವಿಮೋಚನಾ ಸಂಘದ ಮುಖ್ಯಸ್ಥ ಬಿ.ಎಲ್.ಪಾಟೀಲ್ 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ವರದಿಗಳನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ವರದಿ ಆಧಾರದಲ್ಲಿ ಅಂಗನವಾಡಿ ಕೇಂದ್ರಗಳ ಸುಧಾರಣೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಬಗ್ಗೆ ವರದಿಯನ್ನು ಪ್ರಮಾಣಪತ್ರದ ಜೊತೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮಾ. 15ಕ್ಕೆ ಮುಂದೂಡಿತು.
ಇದಕ್ಕೂ ಮೊದಲು, ರಾಜ್ಯದಲ್ಲಿನ ಅಪೌಷ್ಟಿಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ರಮಗಳ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಿ ರಾಜ್ಯ ಸರ್ಕಾರ 2021ರ ಫೆ. 18ರಂದು ಹೊರಡಿಸಿರುವ ಆದೇಶದ ಪ್ರತಿಯನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು.
ಇದನ್ನು ದಾಖಲಿಸಿಕೊಂಡ ಪೀಠ, ಸಮಿತಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಸಮಿತಿಯ ಕಾರ್ಯನಿರ್ವಹಣೆಗೆ ಅಗತ್ಯ ನೆರವು ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.