ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ವಾಸ ಮಾಡುತ್ತಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲು ಯಾವ ವಿಧಾನಗಳನ್ನು ಅನುಸರಿಸಲಾಗುತ್ತಿದೆ ಎಂಬ ಬಗ್ಗೆ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ವಕೀಲ ಕೆ.ಬಿ.ವಿಜಯಕುಮಾರ್ ಹಾಗೂ ಭಾರತ್ ಪುನರುತ್ಥಾನ್ ಟ್ರಸ್ಟ್ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ಪ್ರಮಾಣಪತ್ರ ಸಲ್ಲಿಸಲು ಎರಡು ವಾರ ಕಾಲಾವಕಾಶ ಬೇಕು. ಅದನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ಅದಕ್ಕೆ ಒಪ್ಪಿದ ಪೀಠ, ಎರಡು ವಾರಗಳಲ್ಲಿ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಇದೇ ವೇಳೆ ಕೇಂದ್ರ ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿದ ಕೋರ್ಟ್, ವಿಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲಿ ವಾಸ ಮಾಡುತ್ತಿರುವ ವಿದೇಶಿ ಪ್ರಜೆಗಳ ಬಗ್ಗೆ ಮಾಹಿತಿ ಇಟ್ಟು ನಿಗಾ ವಹಿಸಲು ಕೇಂದ್ರ ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು.