ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆ ಅಗಲೀಕರಣ ಕುರಿತಂತೆ ಬಿಬಿಎಂಪಿ ಯಾವ ರೀತಿಯಲ್ಲಿ ಸಹಕಾರ ಹಾಗೂ ನೆರವು ನೀಡಬಹುದು ಎಂಬುದರ ಕುರಿತು ಮುಂದಿನ ಎರಡು ವಾರಗಳಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ಪಾಲಿಕೆ ಪರ ವಕೀಲರಿಗೆ ಸೂಚನೆ ನಿಡಿದೆ.
ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಹೊಸಮನಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಪಿ ಬಿ ವರಾಲೆ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡು ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಯಾವ ರೀತಿಯಲ್ಲಿ ಸಹಕಾರ ಮತ್ತು ನೆರವು ನೀಡಲಿದೆ ಎಂಬುದರ ಕುರಿತು ಸಂಪೂರ್ಣ ವಿವರವುಳ್ಳ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಿತು.
ಅಲ್ಲದೆ, ರಸ್ತೆ ಅಗಲೀಕರಣಕ್ಕಾಗಿ 58 ಮರಗಳನ್ನು ಸ್ಥಳಾಂತರ ಮಾಡಬೇಕು ಎಂಬುದಾಗಿ ಹೇಳಲಾಗಿದೆ. ಆದರೆ, ಈ ಸಂಬಂಧ ಯಾವ ರೀತಿಯಲ್ಲಿ ಮರಗಳ ಸ್ಥಳಾಂತರ ಕಾರ್ಯ ಮಾಡಲಾಗುವುದು ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಬೇಕು ಎಂದು ನ್ಯಾಯಪೀಠ ಬಿಬಿಎಂಪಿ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಈ ವೇಳೆ ಬಿಬಿಎಂಪಿ ಪರ ವಕೀಲ ಶ್ರೀನಿಧಿ ಅವರು, ಮದುವೆ ಸಮಾರಂಭಗಳಿಗೆ ಬರುವ ವಾಹನಗಳನ್ನು ಮುಖ್ಯರಸ್ತೆ ಪ್ರವೇಶಿಸದಂತೆ ಕ್ರಮ ವಹಿಸಲಾಗುತ್ತಿದೆ. ಅಲ್ಲದೆ, ಅರಮನೆ ಮೈದಾನಕ್ಕೆ ನಾಲ್ಕು ದ್ವಾರಗಳಿದ್ದು, ಆಂತರಿಕ ರಸ್ತೆಗಳ ಮೂಲಕ ಮದುವೆ ಸಮಾರಂಭಗಳ ಪ್ರವೇಶಕ್ಕೆ ವ್ಯವಸ್ಥೆ ಮಾಡುವ ಸಂಬಂಧ ಪಾಲಿಕೆ ಹಿರಿಯ ಅಧಿಕಾರಿಗಳು ಚರ್ಚೆಗಳು ನಡೆಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದನ್ನೂ ಓದಿ: ಆನೇಕಲ್ ತಾಲೂಕಿನ 67 ಎಕರೆ ಗೋಮಾಳ ಒತ್ತುವರಿ ತೆರವಿಗೆ ಹೈಕೋರ್ಟ್ ಆದೇಶ