ಬೆಂಗಳೂರು: ಸಾರ್ವಜನಿಕರಿಂದ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಐಎಂಎ ಕಂಪನಿಯ ಠೇವಣಿದಾರರ ಹಣ ಹಿಂದಿರುಗಿಸಲು ಅಗತ್ಯವಿರುವ ಆಧಾರ್ ದೃಢೀಕರಣವನ್ನು ಆದಷ್ಟು ಬೇಗ ಮುಗಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಠೇವಣಿದಾರರ ಹಣ ಹಿಂಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಠೇವಣಿದಾರರ ಆಧಾರ್ ದೃಢೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈವರೆಗೆ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದರು.
ಇದಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು ಆಧಾರ್ ದೃಢೀಕರಣಕ್ಕೆ ನಿಗದಿತ ನಮೂನೆ ಇದೆ. ಆ ಪ್ರಕಾರ ರಾಜ್ಯ ಸರ್ಕಾರ ಮನವಿ ಸಲ್ಲಿಸಿಲ್ಲ. ನಿಗದಿತ ನಮೂನೆಯಲ್ಲಿ ಮನವಿ ಸಲ್ಲಿಸಿದರೆ, ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಆಧಾರ್ ದೃಢೀಕರಣ ಕೋರಿ 2019ರಲ್ಲೇ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. 2020ರ ಅಕ್ಟೋಬರ್ ಮುಗಿದರೂ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಸಿಕ್ಕಿಲ್ಲ. ಎರಡೂ ಸರ್ಕಾರಗಳ ನಡುವಿನ ಗೊಂದಲದಿಂದಾಗಿ ಸಾವಿರಾರರು ಠೇವಣಿದಾರರು ಕಷ್ಟ ಅನುಭವಿಸುವಂತಾಗಿದೆ. ಈ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹಾಗೆಯೇ ರಾಜ್ಯ ಸರ್ಕಾರ ಈ ಬಗ್ಗೆ ವಿವರಣೆ ನೀಡಬೇಕು ಎಂದು ಸೂಚಿಸಿ, ವಿಚಾರಣೆಯನ್ನು ನವೆಂಬರ್ 11ಕ್ಕೆ ಮುಂದೂಡಿತು.