ಬೆಂಗಳೂರು : ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತರಿಗೆ ಪರಿಹಾರ ನೀಡಲು ಕಷ್ಟಸಾಧ್ಯ ಎಂಬ ನಿಲುವನ್ನು ಪುನಃ ಪರಿಶೀಲಿಸುವಂತೆ ಈ ಹಿಂದೆ ನೀಡಿರುವ ನಿರ್ದೇಶನಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ವಿಮೆ ಸಿಗದಿರುವ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರ ತಾಲೂಕಿನ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ಫೆ.26ರಂದು ಕೃಷಿ ಇಲಾಖೆ ಆಯುಕ್ತರು ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತರಿಗೆ ಸರ್ಕಾರದಿಂದ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಆದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ಮೃತಪಟ್ಟಿರುವ ರೈತರಿಗೆ ಸರ್ಕಾರದಿಂದ ಸಿಗುವ ಈ ಪರಿಹಾರ ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಈ ನಿಲುವನ್ನು ಮರುಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಮಾರ್ಚ್ 2ರಂದು ಹೈಕೋರ್ಟ್, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತ್ತು. ಈ ಸಂಬಂಧ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ನಿರ್ದೇಶಿಸಿದೆ.
ಇದನ್ನೂ ಓದಿ : ಸಿಡಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್ಐಟಿ ರದ್ದು ಕೋರಿ ಹೈಕೋರ್ಟ್ಗೆ ಪಿಐಎಲ್
ಅಲ್ಲದೇ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಲಭ್ಯವಾಗುವ ವಿಮೆ ಸಂಬಂಧ ರಾಜ್ಯದ ರೈತರಿಗೆ ಸೂಕ್ತ ಮಾಹಿತಿ ಲಭ್ಯವಾಗುವಂತೆ ವ್ಯಾಪಕ ಪ್ರಚಾರ ನೀಡಬೇಕು. ಈ ಕುರಿತ ವರದಿಯನ್ನು ಮುಂದಿನ ಏಪ್ರಿಲ್ 20ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ನಿರ್ದೇಸಿಸಿ, ವಿಚಾರಣೆಯನ್ನು ಏ.21ಕ್ಕೆ ಮುಂದೂಡಿತು.