ಬೆಂಗಳೂರು: ಖಾಸಗಿ ಟಿವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಯಾವ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂಬುದರ ಕುರಿತು ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, 2018ರ ಫೆ.19ರಂದು ಕೇಂದ್ರ ಸರ್ಕಾರವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ1995ರ ಅಡಿಯಲ್ಲಿ ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ಅಡಿಯಲ್ಲಿ ಎಲ್ಲ ರಾಜ್ಯಗಳಿಗೆ ಖಾಸಗಿ ಚಾನಲ್‌ಗಳ ಕಾರ್ಯಕ್ರಮಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಿತ್ತು. ಆದರೆ, ರಾಜ್ಯ ಸರ್ಕಾರವು ಇಲ್ಲಿಯವರೆಗೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ವಾದ-ವಿವಾದಗಳನ್ನು ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಪ್ರಮಾಣಪತ್ರ ಸಲ್ಲಿಸಲು
ಸೂಚಿಸಿ, ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿಕೆ ಮಾಡಿದೆ.