ಬೆಂಗಳೂರು: ವಕೀಲರ ಕಚೇರಿಯಲ್ಲಿ ದುಡಿಯುತ್ತಿರುವ ಗುಮಾಸ್ತರು ಅಕಾಲಿಕ ನಿಧನರಾದಗ ಅವರ ಕುಟುಂಬದ ಸದಸ್ಯರ ಕಲ್ಯಾಣಕ್ಕಾಗಿ ಅಗತ್ಯವಿರುವ ಯೋಜನೆ ರೂಪಿಸುವಂತೆ ರಾಜ್ಯ ವಕೀಲರ ಪರಿಷತ್ ಹಾಗೂ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ರಾಜ್ಯ ಮಟ್ಟದ ವಕೀಲರ ಕ್ಲರ್ಕ್‌ಗಳ ಸಂಘದ ಅಧ್ಯಕ್ಷ ಡಿ.ಶಿವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ರಾಜ್ಯ ಕಾನೂನು ಇಲಾಖೆಯ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ವಕೀಲರ ನೋಂದಾಯಿತ ಕ್ಲರ್ಕ್‌ಗಳ ಕಲ್ಯಾಣ ನಿಧಿ ಸಮಿತಿಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?: ವಕೀಲರ ಕಚೇರಿಯಲ್ಲಿ ದುಡಿಯುವ ಕ್ಲರ್ಕ್‌ಗಳ ಕಲ್ಯಾಣ ನಿಧಿಯನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಂಡು ಯೋಜನೆ ರೂಪಿಸಬೇಕು ಎಂದು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ 2008ರ ಏಪ್ರಿಲ್ 16ರಂದು ನೀಡಿರುವ ಆದೇಶದಂತೆ ಯೋಜನೆ ರೂಪಿಸಬೇಕು ಎಂದು ಕೋರಲಾಗಿದೆ.
ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು 2022ರ ಮಾರ್ಚ್ 15ರಂದು ನೀಡಿರುವ ತೀರ್ಪಿನ ಅನುಸಾರ ಪರಿಣಾಮಕಾರಿ ಯೋಜನೆ ರೂಪಿಸಲು ಮತ್ತು ಅವುಗಳನ್ನು ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ರಾಜ್ಯ ಕಾನೂನು ಇಲಾಖೆ ಮತ್ತು ರಾಜ್ಯ ವಕೀಲರ ಪರಿಷತ್‌ಗೆ ಮನವಿ ಸಲ್ಲಿಸಲಾಗಿದೆ. ಈ ಮನವಿಯನ್ನು ಪರಿಗಣಿಸಿ ಶೀಘ್ರವೇ ಸೂಕ್ತ ಯೋಜನೆ ರೂಪಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ವಕೀಲರ ಸಂಘದಿಂದ ಹೋರಾಟದ ಎಚ್ಚರಿಕೆ: ಮುಂದಿನ ವಾರದಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಅಧಿವೇಶದಲ್ಲಿ ವಕೀಲರ ಸುರಕ್ಷತಾ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ಮಸೂದೆಯನ್ನು ಮಂಡಿಸಿ ಅಂಗೀಕರಿಸದಿದ್ದಲ್ಲಿ ರಾಜ್ಯದಾದ್ಯಂತ ವಕೀಲರು ಹೋರಾಟ ಮುಂದಾಗುವುದಾಗಿ ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ಪೊಲೀಸರು ಹಾಗೂ ರೌಡಿಗಳಿಂದ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘವು ಶುಕ್ರವಾರ ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಮುಂದಿನ ಅಧಿವೇಶನದಲ್ಲೇ ಮಸೂದೆ ಮಂಡಿಸಿ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಶನಿವಾರ ರಾಜ್ಯ ವಕೀಲರ ಸಂಘದ ಎಲ್ಲಾ ಜಿಲ್ಲಾ ಘಟಕಗಳ ಪ್ರಮುಖರನ್ನು ಬೆಂಗಳೂರಿಗೆ ಕರೆಯಿಸಿಕೊಳ್ಳಲಾಗುವುದು.
ರಾಜ್ಯ ವಕೀಲರ ಪರಿಷತ್ ಸಹಯೋಗದೊಂದಿಗೆ ಮಹತ್ವದ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಸೋಮವಾರದ ಅಂತ್ಯದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿಯನ್ನೂ ಸಲ್ಲಿಸಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಮನವಿಗೆ ಗಣನೆಗೆ ತೆಗೆದುಕೊಳ್ಳದಿದ್ದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮಾತನಾಡಿ ಗೃಹ ಸಚಿವರು ಮತ್ತು ಯುವ ಪೊಲೀಸರ ಕ್ರಮವನ್ನು ಖಂಡಿಸಿದರು.
(ಓದಿ: ಪತ್ನಿ ಮೇಲೆ ಸಂಶಯ: ಎರಡನೇ ಬಾರಿ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡದ ಹೈಕೋರ್ಟ್)