ಬೆಂಗಳೂರು: ಮನೆ ಇಲ್ಲದವರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವ ಯೋಜನೆ ಅನುಷ್ಠಾನ ಮಾಡಲು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ 4 ವಾರಗಳ ಗಡುವು ನೀಡಿದ್ದು, ಒಂದು ವೇಳೆ ಆಕ್ಷೇಪಣೆ ಸಲ್ಲಿಸದಿದ್ದರೆ ಮುಂದಿನ ವಿಚಾರಣೆಗೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ತಾಕೀತು ಮಾಡಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯ ‘ಹೌಸಿಂಗ್ ಫಾರ್ ಆಲ್’ ಕಾರ್ಯಕ್ರಮದಡಿ ಗ್ರಾಮೀಣ ಮತ್ತು ನಗರ ಪ್ರದೇಶದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವ ಯೋಜನೆ ಅನುಷ್ಠಾನ ಮಾಡಲು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು 4 ವಾರ ಗಡುವು ನೀಡಿರುವ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸದಿದ್ದರೆ ಮುಂದಿನ ವಿಚಾರಣೆ ವೇಳೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವ ‘ಹೌಸಿಂಗ್ ಫಾರ್ ಆಲ್’ ಯೋಜನೆಯನ್ನು ಅನುಷ್ಠಾನ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ, ಅರ್ಜಿ ಕುರಿತು ಈ ಹಿಂದೆ ನ್ಯಾಯಾಲಯ ಹೊರಡಿಸಿರುವ ಆದೇಶಗಳನ್ನು ಪೀಠ ಪರಿಶೀಲಿಸಿತು. ರಾಜ್ಯ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯ ಸೂಚಿಸಿದ್ದರೂ ಸರ್ಕಾರ ಆಕ್ಷೇಪಣೆ ಸಲ್ಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೀಠ, ಒಂದು ತಿಂಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕೊನೆಯ ಅವಕಾಶ ನೀಡಿ, ವಿಚಾರಣೆಯನ್ನು ನವೆಂಬರ್ 8 ಕ್ಕೆ ಮುಂದೂಡಿತು.