ಬೆಂಗಳೂರು: ಇಲ್ಲಿನ ಕೆಂಗೇರಿಯ ಅನಾಥಾಶ್ರಮದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸದ ಪೊಲೀಸರ ವಿರುದ್ಧ ಹೈಕೋರ್ಟ್ ಗರಂ ಆಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ಆದೇಶ ನೀಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ತನಿಖೆಯ ದೃಷ್ಟಿಯಿಂದ ಬಾಲಕಿಯರ ಆರೋಗ್ಯ ತಪಾಸಣೆ, ಹಾಗೇ ತಪ್ಪಿತಸ್ಥರು ಯಾರು ಎಂಬುವುದರ ಬಗ್ಗೆ ತನಿಖೆಯನ್ನು ಪೊಲೀಸರು ಸೂಕ್ತ ರೀತಿಯಲ್ಲಿ ನಡೆಸಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪೊಲೀಸರು ಆಶ್ರಮದ ಸಿಸಿಟಿವಿ ಕ್ಯಾಮಾರಾಗಳ ಬಗ್ಗೆ ಯಾಕೆ ಪರಿಶೀಲನೆ ನಡಿಸಿಲ್ಲ. ಮುಂದಿನ ವಿಚಾರಣೆ ವೇಳೆ ತನಿಖೆಯ ಪ್ರಗತಿ ಸಲ್ಲಿಸಿ ಎಂದು ವಿಚಾರಣೆಯನ್ನ ಆಗಸ್ಟ್ 13ಕ್ಕೆ ಮುಂದೂಡಿತು.
ನವಜಾತ ಶಿಶುಗಳ ಮರಣ: ರಾಜ್ಯದಲ್ಲಿ ಹೆರಿಗೆ ಪೂರ್ವ ತಾಯಂದಿರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಿರುವ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಕೈಗೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ನಮ್ಮ ರಾಜ್ಯದಲ್ಲಿ ಕೆಲ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಹೆರಿಗೆ ಪೂರ್ವ ತಾಯಂದಿರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸಾರ್ವಜನಿಕ ಆರೋಗ್ಯ ನೀತಿಯ ಶಿಫಾರಸುಗಳನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು, ನವಜಾತ ಶಿಶುಗಳ ಮರಣ ಪ್ರಮಾಣದ ಬಗ್ಗೆ ವಿವರ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನ ಮುಂದೂಡಿದೆ.