ಬೆಂಗಳೂರು : ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ಪ್ರಕಾರ ವಿಲೇವಾರಿ ಮಾಡಲು ಪೌರ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆಯೇ ಎಂಬ ಬಗ್ಗೆ ವಿವರಣೆ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯದಂತೆ ವಿಲೇವಾರಿ ಮಾಡಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಕೊರೊನಾ ಸಂಬಂಧಿ ವೈದ್ಯಕೀಯ ತ್ಯಾಜ್ಯವನ್ನು ಜೈವಿಕ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರ ಪ್ರಕಾರ ನಿರ್ವಹಣೆ ಮಾಡಬೇಕಿದೆ.
ಜೈವಿಕ ತ್ಯಾಜ್ಯ ನಿರ್ವಹಣೆ ಕುರಿತಂತೆ ಪೌರ ಕಾರ್ಮಿಕರಿಗೆ ತರಬೇತಿ ನೀಡಬೇಕು. ಹೀಗಾಗಿ, ಪೌರ ಕಾರ್ಮಿಕರಿಗೆ ತರಬೇತಿ ನೀಡಲಾಗಿದೆಯೇ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಬಿಬಿಎಂಪಿಗೆ ಸೂಚಿಸಿ ವಿಚಾರಣೆ ಮುಂದೂಡಿತು.