ಬೆಂಗಳೂರು: ನಗರದ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಬಫರ್ ಝೋನ್ ಸುತ್ತ 40 ಅಡಿ ಅಗಲದ ಏರಿ ನಿರ್ಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ಆದೇಶ ಪಾಲಿಸದ ಬಿಡಿಎ ಆಯುಕ್ತರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬಾರದೇಕೆ ಎಂಬುದಕ್ಕೆ ವಿವರಣೆ ನೀಡಿ ಎಂದು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಕೆರೆ ಸಂರಕ್ಷಣೆ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ಇದೇ ಅರ್ಜಿ ಜೂನ್ 12ರಂದು ವಿಚಾರಣೆಗೆ ಬಂದಿದ್ದಾಗ, ಅರ್ಜಿದಾರರ ಪರ ವಕೀಲರು ವರ್ತೂರು ಹಾಗೂ ಬೆಳ್ಳಂದೂರು ಕೆರೆಗಳ ಬಫರ್ ವಲಯದಲ್ಲಿ ಬಿಡಿಎ ರಸ್ತೆ ನಿರ್ಮಿಸುತ್ತಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದರು.
ಇದಕ್ಕೆ ಸ್ಪಷ್ಟನೆ ನೀಡಿ, ಬಿಡಿಎ ನಿರ್ಮಿಸುತ್ತಿರುವುದು ರಸ್ತೆಯಲ್ಲ ಏರಿ ಎಂದು ತಿಳಿಸಿತ್ತು. ಹೇಳಿಕೆ ದಾಖಲಿಸಿಕೊಂಡಿದ್ದ ಪೀಠ, ಕೆರೆಗಳ ಮೇಲ್ವಿಚಾರಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ರಚಿಸಿರುವ ಸಮಿತಿಗೆ ಏರಿ ನಿರ್ಮಾಣ ಮಾಡುತ್ತಿರುವ ವಿಚಾರವನ್ನು ತಿಳಿಸುವಂತೆ ಬಿಡಿಎ ಆಯುಕ್ತರಿಗೆ ಆದೇಶಿಸಿತ್ತು.
ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ನೀಡಿದ್ದ ಆದೇಶ ಪಾಲನೆ ಮಾಡದ ವಿಚಾರ ಗಮನಿಸಿದ ಪೀಠ, ಬಿಡಿಎ ಆಯುಕ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.
ಅಲ್ಲದೆ, ನಿಮ್ಮ ವಿರುದ್ಧ ಏಕೆ ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.