ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಕೆಲವೊಂದು ವಿನಾಯಿತಿಗಳನ್ನು ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬೆಂಗಳೂರಿನ ‘ಭಾರತ್ ಯುವಜನ ಸೇನೆ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ಹಾಗೂ ನ್ಯಾ. ಜಾನ್ ಮೈಕೆಲ್ ಡಿ. ಕುನ್ಹ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ನವೀಕರಣಕ್ಕೆ ನೀಡಿರುವ ವಿನಾಯಿತಿಗಳನ್ನು ಗಮನಿಸಿದರೆ ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ’ (ಕೆಪಿಎಂಇ) ಮೂಲ ಕಾಯ್ದೆಯ ಉದ್ದೇಶ ನಿರರ್ಥಕಗೊಳ್ಳಲಿದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟಿತು. ಹಾಗೆಯೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಆಯುಕ್ತ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ - ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ನವೀಕರಣ ಪ್ರಕ್ರಿಯೆಯಲ್ಲಿ ವ್ಯಾಪಾರ ಪರವಾನಿಗೆ, ವಾಸ ದೃಢೀಕರಣ ಪತ್ರ, ಪರಿಶೀಲನೆ, ಡೀಮ್‌ಡ್ ಅರ್ಜಿ ಪ್ರಮಾಣಪತ್ರ ಸೇರಿದಂತೆ ಕೆಲವೊಂದು ವಿನಾಯಿತಿಗಳನ್ನು ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು 2020ರ ಆ.17ರಂದು ಹೊರಡಿಸಿರುವ ಸುತ್ತೋಲೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.