ಬೆಂಗಳೂರು : ಶಾಲಾ ಶುಲ್ಕ ಹೆಚ್ಚಿಸದಂತೆ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಆಕ್ಷೇಪಿಸಿ ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ಹಾಗೂ ಆಯುಕ್ತ ಅನ್ಬುಕುಮಾರ್ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.
ಅರ್ಜಿಯಲ್ಲಿ ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಈ ಹಿಂದೆ ಸರ್ಕಾರಕ್ಕೆ ಶಾಲಾ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಸರ್ಕಾರ ಪರಿಗಣಿಸದ ಹಿನ್ನೆಲೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಅರ್ಜಿದಾರರ ಕೋರಿಕೆ ಪರಿಗಣಿಸುವಂತೆ ಮೌಖಿಕವಾಗಿ ಆದೇಶಿಸಿತ್ತು. ಆದರೆ, ಅಧಿಕಾರಿಗಳು ನ್ಯಾಯಾಲಯದ ಆದೇಶ ಧಿಕ್ಕರಿಸಿ, 2020-21ನೇ ಸಾಲಿನಲ್ಲಿ ಶಾಲೆಗಳು ಶುಲ್ಕ ಹೆಚ್ಚಿಸಿದರೆ ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಖಾಸಗಿ ಶಾಲೆಗಳಲ್ಲಿ 55 ಸಾವಿರಕ್ಕೂ ಅಧಿಕ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 15 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕೋವಿಡ್ ನಿಂದಾಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಶುಲ್ಕ ಹೆಚ್ಚಿಸದಿದ್ದರೆ ಶಾಲೆಗಳನ್ನು ನಡೆಸುವುದೇ ಕಷ್ಟ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.