ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪೀಠವು ತನಿಖಾಧಿಕಾರಿಗಳು ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂಪತ್ ರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಬಿ.ಎ. ಪಾಟೀಲ್ ಅವರಿದ್ದ ಪೀಠ ಇಂದು ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಭಯೋತ್ಪಾದನೆ ನಿಗ್ರಹ ದಳ ಮತ್ತು ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಅವರಿಗೆ ನೋಟಿಸ್ ಜಾರಿ ಮಾಡಿತು. ಹಾಗೆಯೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು.
ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಮಾಜಿ ಮೇಯರ್ ಸಂಪತ್ ರಾಜ್ ಕುಮ್ಮಕ್ಕು ನೀಡಿದ್ದರು ಎಂಬ ಆರೋಪದಡಿ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಬಂಧನ ಭೀತಿಗೆ ಒಳಗಾಗಿದ್ದ ಸಂಪತ್ ರಾಜ್, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಜಾಗೊಂಡಿತ್ತು. ಬಳಿಕ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆ ಸೇರಿದ್ದ ಅವರು ಅಲ್ಲಿಂದಲೇ ಪರಾರಿಯಾಗಿದ್ದರು.
ಈ ವಿಚಾರ ಹೈಕೋರ್ಟ್ನಲ್ಲಿ ಪ್ರಸ್ತಾಪವಾದಾಗ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ಆರೋಪಿ ಪತ್ತೆಗೆ ಲಭ್ಯವಿರುವ ಎಲ್ಲ ಕ್ರಮಗಳನ್ನು ಬಳಸಿ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿತ್ತು. ಅದರಂತೆ ಸಿಸಿಬಿ ಪೊಲೀಸರು ನವೆಂಬರ್ 16ರಂದು ಆರೋಪಿ ಸಂಪತ್ ರಾಜ್ ಅವರನ್ನು ಬಂಧಿಸಿದ್ದರು. ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದ ವಿಚಾರಣಾ ನ್ಯಾಯಾಲಯ, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 67ನೇ ಸಿಟಿ ಸಿವಿಲ್ ಕೋರ್ಟ್ ಡಿ.1ರಂದು ತಿರಸ್ಕರಿಸಿತ್ತು.