ಬೆಂಗಳೂರು : ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಕ್ರಮವೆಸಗಿದ ಆರೋಪದಡಿ ದಾಖಲಿಸಿರುವ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಮಾಜಿ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದೆ.
ಆರ್ಆರ್ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನಕಲಿ ಗುರುತಿನ ಚೀಟಿ ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ನಗರದ ಆನಂದ್ ಕುಮಾರ್ ಹಾಗೂ ಸಂತೋಷ್ ಕುಮಾರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಅರ್ಜಿಯಲ್ಲಿ 5ನೇ ಪ್ರತಿವಾದಿಯಾಗಿರುವ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿ, ನವೆಂಬರ್ 11ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸುವ ಮೂಲಕ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಕೋರಿಕೆ: 2018ರ ವಿಧಾನಸಭೆ ಚುನಾವಣೆಯಲ್ಲಿ ಆರ್ಆರ್ ನಗರ ವಿಧಾನಸಭಾ ಕ್ಷೇತ್ರದಿಂದ ಮುನಿರತ್ನ ಸ್ಪರ್ಧಿಸಿದ್ದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ 9 ಸಾವಿರಕ್ಕೂ ಅಧಿಕ ನಕಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಹಾಗೆಯೇ ಮುನಿರತ್ನ ಸ್ಪರ್ಧಿಸಿದ್ದ ಪಕ್ಷದ ಶಾಲು ಹಾಗೂ ಚುನಾವಣಾ ಭಿತ್ತಿಪತ್ರಗಳು ಲಭ್ಯವಾಗಿದ್ದವು.
ಈ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಹಾಗೂ ಸ್ಥಳಿಯ ನಿವಾಸಿ ರಾಕೇಶ್ ಎಂಬುವರು ಪ್ರತ್ಯೇಕವಾಗಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪೊಲೀಸರು ಪ್ರಕರಣವನ್ನು ಸೂಕ್ತ ರೀತಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಮನವಿ ಮಾಡಿದ್ದಾರೆ.