ಬೆಂಗಳೂರು: ಬೃಹತ್ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ವಿರುದ್ಧವಾಗಿ ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಬಿಬಿಎಂಪಿ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವದ್ಧಿ ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯ ಪೀಠದಲ್ಲಿ ಇಂದು ನಡೆಯಿತು. ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ನಿಯೋಜಿಸಿರುವುದು ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಯ ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಇದಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿತು.