ಬೆಂಗಳೂರು: ಪುಲಕೇಶಿ ನಗರದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬೆಂಗಳೂರು ಪೂರ್ವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತ, ಬೆಂಗಳೂರು ಪೂರ್ವ ವಿಭಾಗದ ಉಪ ಆಯುಕ್ತ, ಪುಲಕೇಶಿನಗರ ಉಪ ವಿಭಾಗದ ಸಹಾಯಕ ಆಯುಕ್ತ ಹಾಗೂ ಪುಲಕೇಶಿನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ವಾದಿಸಿ, 2019ರ ಜುಲೈ 10ರಂದು ಪುಲಕೇಶಿನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದಿತ್ತು. ಪ್ರಕರಣದಲ್ಲಿ ಆರು ಜನ ಕಾರ್ಮಿಕರು ಮೃತಪಟ್ಟರು. ಪ್ರಕರಣ ಸಂಬಂಧ ಪುಲಕೇಶಿನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದರೂ ಸಹ ತನಿಖೆ ಪೂರ್ಣಗೊಳಿಸಿಲ್ಲ. ಯಾರನ್ನೂ ಬಂಧಿಸಿಲ್ಲ. ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ ಎಂದು ವಿವರಿಸಿದರು.