ಬೆಂಗಳೂರು: ರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವ ವೇಳೆ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಯಂತ್ರಣಾ ಕೊಠಡಿಗಳನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಭಾರತ್ ಪುನರುತ್ಥಾನ್ ಟ್ರಸ್ಟ್ ಕಾರ್ಯದರ್ಶಿ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಗೃಹ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
ನಗರದಲ್ಲಿ 1.2 ಕೋಟಿ ಜನಸಂಖ್ಯೆ ಇದ್ದು, 80 ಲಕ್ಷ ವಾಹನಗಳಿವೆ. ವಿಶ್ವದ ಪ್ರಸಿದ್ಧ ಆಸ್ಪತ್ರೆಗಳು ಬೆಂಗಳೂರಿನಲ್ಲಿವೆ. ಅಪಘಾತ ಸಂಭವಿಸಿದ ಮೊದಲ 60 ನಿಮಿಷಗಳನ್ನು ‘ಗೋಲ್ಡನ್ ಅವಧಿ’ ಎಂದು ಹೇಳಲಾಗುತ್ತದೆ. ಈ ಅವಧಿಯಲ್ಲಿ ಆಸ್ಪತ್ರೆಗೆ ತಲುಪಿ ಚಿಕಿತ್ಸೆ ಲಭಿಸಿದರೆ ಸಾವು-ನೋವು ತಡೆಗಟ್ಟಬಹುದು. ಆದರೆ, ಶೇ.33ರಷ್ಟು ಪ್ರಕರಣಗಳಲ್ಲಿ ಆಸ್ಪತ್ರೆಗೆ ತಲುಪಲು ವಿಳಂಬವಾಗುತ್ತಿದ್ದು, ಟ್ರಾಫಿಕ್ ಸಮಸ್ಯೆಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಆದ್ದರಿಂದ, ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8ರಿಂದ ರಾತ್ರಿ 10ರವರೆಗೆ ಅಪಘಾತ ನಡೆದ ಸ್ಥಳದಿಂದ ಆಸ್ಪತ್ರೆಗೆ ತಲುಪುವವರೆಗೆ ಆ್ಯಂಬುಲೆನ್ಸ್‌ಗಳಿಗೆ ಸಂಚಾರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಹಿರಿಯ ಟ್ರಾಫಿಕ್ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ‘ಆ್ಯಂಬುಲೆನ್ಸ್ ಕಂಟ್ರೋಲ್ ರೂಂ’ ತೆರೆಯಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜಿಪಿಎಸ್ ಅಳವಡಿಸಿಕೊಳ್ಳುವಂತೆ ಅ್ಯಂಬುಲೆನ್ಸ್ ಮಾಲೀಕರಿಗೆ ಸೂಚಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.