ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳ ತೆರವು ಕಾರ್ಯಾಚರಣೆ ಮತ್ತು ಗುತ್ತಿಗೆ ಅವಧಿ ಮುಕ್ತಾಯವಾಗಿರುವ ಮಳಿಗೆಯ ಪರವಾನಗಿ ನವೀಕರಣ ಕಾರ್ಯವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೆ.ಆರ್ ಮಾರುಕಟ್ಟೆ ಸಂಕೀರ್ಣದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಮಳಿಗೆಗಳನ್ನು ತೆರವುಗೊಳಿಸಲು ಪಾಲಿಕೆಗೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಹೂವು ವ್ಯಾಪಾರಿಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಇದಕ್ಕೂ ಮುನ್ನ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ, ಕೆ.ಆರ್. ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗಾಗಿ ಮೀಸಲಿಟ್ಟದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ 24 ಮಳಿಗೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿ ನಿರ್ಮಿಸಿರುವ ಮಳಿಗೆಗಳನ್ನು ಕೂಡಲೇ ತೆರವುಗೊಳಿಸಬೇಕು. ಗುತ್ತಿಗೆ ಅವಧಿ ಮುಗಿದಿರುವ ಮಳಿಗೆಗಳ ಪರವಾನಿಗೆಯನ್ನು ಕಾನೂನು ಪ್ರಕಾರ ನವೀಕರಿಸುವ ವಿಚಾರವು ಬಿಬಿಎಂಪಿಗೆ ಬಿಟ್ಟ ವಿಚಾರ. ಒಂದೊಮ್ಮೆ ನವೀಕರಿಸಲು ಮಂದಾದರೆ ಮೂರು ತಿಂಗಳಲ್ಲಿ ಆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಇದನ್ನು ಓದಿ:ಆಡಳಿತಕ್ಕೆ ಮೇಜರ್ ಸರ್ಜರಿ : 10 ಐಎಎಸ್ ಅಧಿಕಾರಿಗಳ ವರ್ಗಾವಣೆ