ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರಿಲ್ಲ. ಈ ಕುರಿತು ಸಲ್ಲಿಸಿರುವ ಮನವಿಯನ್ನೂ ಶಿಕ್ಷಣ ಇಲಾಖೆ ಪರಿಗಣಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿರುವ ಹೈಕೋರ್ಟ್, ಕೂಡಲೇ ಇಂಗ್ಲಿಷ್ ಭಾಷೆ ಶಿಕ್ಷಕರನ್ನು ನೇಮಕ ಮಾಡುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದೆ.
ಈ ಕುರಿತು ತುಮಕೂರು ಜಿಲ್ಲೆ ತುರುವೇಕೆರೆ ಹೋಬಳಿಯ ದಂಡಿನಶಿವ್ರ ಗ್ರಾಮದ ಡಿ.ಟಿ ಲಕ್ಷ್ಮಿನಾರಾಯಣ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ದಂಡಿನಶಿವ್ರ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಿಲ್ಲ. ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಕೋರಿ 2021ರ ಅಕ್ಟೋಬರ್ 8ರಂದು ಸಲ್ಲಿಸಿರುವ ಅರ್ಜಿಯನ್ನೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಗಣಿಸಿಲ್ಲ. ಶಾಲೆಯಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಒಟ್ಟು 166 ವಿದ್ಯಾರ್ಥಿಗಳಿದ್ದಾರೆ. 10ನೇ ತರಗತಿ ಪರೀಕ್ಷೆಗಳನ್ನು ಬೋರ್ಡ್ ನಡೆಸಲಿದ್ದು, ಇಂಗ್ಲಿಷ್ ಭಾಷೆ ಬೋಧಿಸುವ ಶಿಕ್ಷಕರಿಲ್ಲದೆ ಕಲಿಕೆಗೆ ಸಮಸ್ಯೆಯಾಗಿದ್ದು, ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಲಿದೆ ಎಂದು ವಿವರಿಸಿದರು.
ವಾದ ಆಲಿಸಿದ ಪೀಠ, ಶಾಲೆಯಲ್ಲಿ ಇಂಗ್ಲಿಷ್ ಭಾಷೆ ಶಿಕ್ಷಕರು ಇಲ್ಲದಿರುವ ಕುರಿತು ಹಾಗೂ ಸಮಸ್ಯೆ ಬಗೆಹರಿಸಲು ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಕೂಡಲೇ ಪರಿಗಣಿಸಬೇಕು. ಶಾಲೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸಬೇಕು. ಈ ಕುರಿತಂತೆ ಅಗತ್ಯ ಕ್ರಮ ಕೈಗೊಂಡ ವರದಿಯನ್ನು ಡಿಸೆಂಬರ್ 22ರೊಳಗೆ ಸಲ್ಲಿಸಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.
ಇದನ್ನೂ ಓದಿ: ಪರಿಷತ್ ಚುನಾವಣೆ: ಪುರಸಭೆಗಳ ನಾಮನಿರ್ದೇಶಿತ ಸದಸ್ಯರ ಮತದಾನಕ್ಕೆ ಹೈಕೋರ್ಟ್ ಸಮ್ಮತಿ