ಬೆಂಗಳೂರು : ರಾಜ್ಯದಲ್ಲಿರುವ ದಿವ್ಯಾಂಗ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಬ್ರೈಲ್ ಲಿಪಿ ಪಠ್ಯ ಪುಸ್ತಕಗಳನ್ನು ಇ-ಪಬ್ 3 ಮಾದರಿಯಲ್ಲಿ ಪರಿವರ್ತಿಸಿ, ಮುಂದಿನ ಎರಡು ತಿಂಗಳೊಳಗೆ ಪೂರೈಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಈ ಕುರಿತು ದಿ ನ್ಯಾಷನಲ್ ಫೆಡರೇಷನ್ ಆಫ್ ದಿ ಬೈಂಡ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ವಿದ್ಯಾರ್ಥಿಗಳಿಗೆ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಯ 132 ಬ್ರೈಲ್ ಲಿಪಿ ಪಠ್ಯ ಪುಸ್ತಕಗಳನ್ನು ಇ-ಪಬ್ 3 ಮಾದರಿಗೆ ಪರಿವರ್ತಿಸಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ (ಕೆಟಿಬಿಎಸ್) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಉಳಿದ 403 ಪುಸ್ತಕಗಳನ್ನು ಪರಿವರ್ತಿಸಿ ಅಪ್‌ಲೋಡ್ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗುವುದರೊಳಗೆ ಈ ಕಾರ್ಯ ಪೂರ್ಣಗೊಳಿಸಲಾಗುವುದು. ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದನ್ನೂ ಓದಿ: ದಾವಣಗೆರೆ : ವಿದ್ಯಾರ್ಥಿಗಳಿಗಾಗಿ ವಿದ್ವತ್ ಲರ್ನಿಂಗ್ ಆ್ಯಪ್ ಬಿಡುಗಡೆ
ವಾದ ಆಲಿಸಿದ ಪೀಠ, ಪಠ್ಯಪುಸ್ತಕಗಳನ್ನು ಪರಿವರ್ತಿಸಲು ಅಷ್ಟೊಂದು ಸಮಯ ನೀಡಲಾಗದು. ಎರಡು ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಿ ದೃಷ್ಟಿ ವಿಶೇಷಚೇನತ ವಿದ್ಯಾರ್ಥಿಗಳಿಗೆ ಪೂರೈಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿತು.
ಇದೇ ವೇಳೆ ಸರ್ಕಾರಿ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಹೈಕೋರ್ಟ್ ಆದೇಶದಂತೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಒಟ್ಟು 1,692 ದೃಷ್ಟಿ ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ. 145 ಮಕ್ಕಳು ಸರ್ಕಾರಿ ಶಾಲೆಗಳಲ್ಲಿದ್ದರೆ, 533 ಮಕ್ಕಳು ಅನುದಾನ ರಹಿತ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. 1014 ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿದ್ದಾರೆ ಎಂದು ವಿವರಿಸಿದರು.