ಬೆಂಗಳೂರು: ಟಿವಿ ವಾಹಿನಿಗಳು ಗೌಪ್ಯತೆ ಹಕ್ಕನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಎಲ್ಲ ಮಾಧ್ಯಮಗಳಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ಸುದ್ದಿ ಮಾಧ್ಯಮಗಳು ನಾಗರಿಕರ ಗೌಪ್ಯತೆ ಹಕ್ಕನ್ನು ಕಸಿದುಕೊಳ್ಳಬಾರದು ಮತ್ತು ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಂತ್ರಣ ಕಾಯ್ದೆ ನಿಯಮಗಳನ್ನು ಪಾಲಿಸಬೇಕು ಎಂದು ಮಧ್ಯಂತರ ಆದೇಶ ಹೊರಡಿಸಿದೆ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮಾಧ್ಯಮಗಳು ವ್ಯಕ್ತಿಯ ಗೌಪ್ಯತೆ ಹಕ್ಕನ್ನು ಉಲ್ಲಂಘಿಸಿವೆ ಎಂದು ನಗರದ ವಕೀಲ ಆತ್ಮ ವಿ. ಹಿರೇಮಠ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠ ಮಾಧ್ಯಮಗಳಿಗೆ ಈ ನಿರ್ದೇಶನ ನೀಡಿದೆ.
ಇದೇ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಮುದ್ರಣ, ಟಿವಿ, ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣಗಳು ಸೇರಿದಂತೆ 73 ಮಾಧ್ಯಮಗಳಿಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರು, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸುದ್ದಿ ಮಾಧ್ಯಮಗಳು ತಮ್ಮ ವ್ಯಾಪ್ತಿ ಮೀರಿ ವರ್ತಿಸಿವೆ. ರಮೇಶ್ ಜಾರಕಹೊಳಿ ಪ್ರಕರಣದಲ್ಲಿ ಗೌಪ್ಯತೆ ಹಕ್ಕನ್ನು ಉಲ್ಲಂಘಿಸಿವೆ. ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 5ರ ಪ್ರಕಾರ ಟಿವಿ ಕಾರ್ಯಕ್ರಮಗಳು ಪೋಗ್ರಾಂ ಕೋಡ್ ನಿಯಮಗಳಿಗೆ ಕಟ್ಟುನಿಟ್ಟಾಗಿ ಇರಬೇಕು. ಆದರೆ, ಈ ಪ್ರಕರಣದಲ್ಲಿ ಮಾಧ್ಯಮಗಳು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಇ) ಹಾಗೂ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ನಿಷೇಧ ಸೆಕ್ಷನ್ 4ನ್ನುಉಲ್ಲಂಘಿಸಿವೆ.
ದಿನೇಶ್ ಕಲ್ಲಹಳ್ಳಿ ನೀಡಿರುವ ವಿಡಿಯೋ ಸತ್ಯಾಸತ್ಯತೆ ಪರಿಶೀಲಿಸದೆ ಪ್ರಸಾರ ಮಾಡಿರುವುದು ಗೌಪ್ಯತೆ ಹಕ್ಕಿನ ಉಲ್ಲಂಘನೆಯಾಗಿದೆ. ಆದ್ದರಿಂದ ಪೋಗ್ರಾಂ ಕೋಡ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಅಲ್ಲದೇ, ಖಾಸಗಿತನ ಹಕ್ಕು ಕಸಿದುಕೊಂಡಿರುವ ಮಾಧ್ಯಮಗಳ ವಿರುದ್ಧ ಕೇಬಲ್ ಟೆಲಿವಿಷನ್ ನೆಟ್ವರ್ಕ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಅಡಿ ಕಾನೂನು ಕ್ರಮ ಜರುಗಿಸಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸುವಂತೆಯೂ ಕೋರಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ.