ಬೆಂಗಳೂರು: ನಮಾಜ್ ಸಂದರ್ಭದಲ್ಲಿ ಅತಿಯಾದ ಧ್ವನಿವರ್ಧಕಗಳನ್ನು ಬಳಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಅಲ್ಲದೇ ನಿಗದಿತ ಗಡುವಿನಲ್ಲಿ ಕೋರ್ಟ್ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದೆ.
ಬೆಂಗಳೂರಿನ ಗೋವಿಂದರಾಜನಗರ ಮಸೀದಿಯಲ್ಲಿ ಧ್ವನಿವರ್ಧಕ ಬಳಸುತ್ತಿರುವುದನ್ನು ಆಕ್ಷೇಪಿಸಿ ವಕೀಲೆ ಸುಮಂಗಲ ಎ.ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೋರ್ಟ್ ಹಿಂದಿನ ವಿಚಾರಣೆ ವೇಳೆ ನೀಡಿದ್ದ ಆದೇಶ ಪಾಲಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಈವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಮುಂದಾಗಿಲ್ಲ. ಕಡೆ ಪಕ್ಷ ಧ್ವನಿವರ್ದಕಗಳ ಡೆಸಿಬಲ್ ಪರೀಕ್ಷೆಯನ್ನೂ ನಡೆಸಿಲ್ಲ. ಮಂಡಳಿಯ ಅಧಿಕಾರಿಗಳಿಗೆ ಕಾನೂನಿನ ಎಬಿಸಿಡಿ ಗೊತ್ತಿರುವಂತೆ ಕಾಣುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.
ಕೋರ್ಟ್ ಈ ಹಿಂದಿನ ಆದೇಶದ ವೇಳೆ ನೀಡಿದ್ದ ನಿರ್ದೇಶನಗಳನ್ನು ಮಂಡಳಿ ಅಧಿಕಾರಿಗಳು ಪಾಲಿಸಿ, ಆ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಬೇಕು. ಇಲ್ಲದಿದ್ದಲ್ಲಿ ಆದೇಶ ಪಾಲಿಸದ ಮಂಡಳಿ ಅಧ್ಯಕ್ಷರ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿತು.
ಹಿಂದಿನ ವಿಚಾರಣೆ ವೇಳೆ ಕೆಎಸ್ಪಿಸಿಬಿ ಅಧಿಕಾರಿಗಳು ಲಿಖಿತ ಮಾಹಿತಿ ನೀಡಿ ಸ್ಥಳೀಯ ಪೊಲೀಸ್ ಸಬ್ ಇನ್ಸಪೆಕ್ಟರ್ ಅನುಮತಿ ನೀಡಿದ್ದಾರೆ. ಹೀಗಾಗಿ ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ತೋಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪೀಠ, ಶಬ್ಧ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ-2000 ನಿಯಮಗಳ ಪ್ರಕಾರ ಡಿಸಿಪಿ ಹಂತದ ಅಧಿಕಾರಿ ಮಾತ್ರ ಅನುಮತಿ ನೀಡಲು ಸಾಧ್ಯ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಶಬ್ಧ ಮಾಲಿನ್ಯಕ್ಕೆ ಕಾರಣವಾದವರ ವಿರುದ್ಧ ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆ 1986ರ ಸೆಕ್ಷನ್ 15 ರ ಅಡಿ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ನಿರ್ದೇಶಿಸಿತು.