ಬೆಂಗಳೂರು: ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಪ್ರಕ್ರಿಯೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಸಂಬಂಧದ ಸರ್ಕಾರದ ಪ್ರಕ್ರಿಯೆಯನ್ನು ಪ್ರಶ್ನಿಸಿ ಬೆಂಗಳೂರಿನ ಡಿ.ಜಿ.ರಾಘವೇಂದ್ರ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠ ಪಂಚಮ ಸಾಲಿ ಲಿಂಗಾಯತರಿಗೆ ಮೀಸಲಾತಿ ನೀಡುವ ಸಂಬಂಧ ಯಾವುದೇ ಪ್ರಕ್ರಿಯೆಗಳನ್ನು ಮುಂದುವರೆಸದಂತೆ ಯತಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಗುರುವಾರ ನ್ಯಾಯಾಲಯದ ಕಲಾಪ ಮುಕ್ತಾಯವಾಗುತ್ತಿದ್ದ ಸಂದರ್ಭದಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಹಾಜರಾಗಿ, ಪಂಚಮ ಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣಾ ಹಂತದಲ್ಲಿದೆ. ಈ ನಡುವೆ, ಮೀಸಲಾತಿ ನೀಡುವ ಸಂಬಂಧ ಸರ್ಕಾರ ಕೆಲ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ತುರ್ತು ವಿಚಾರಣೆಗೆ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಅಲ್ಲದೇ, ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ನಿರ್ಧಾರಗಳಿಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದು ಈ ಹಿಂದೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದರು. ಆದರೂ ಈವರೆಗೂ ಯಾವುದೇ ಲಕೋಟೆ ಸಲ್ಲಿಸಿಲ್ಲ. ಈಗಾಗಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅರ್ಜಿಗೆ ಆಕ್ಷೇಪ ವ್ಯಕಪಡಿಸಿದ ಅಡ್ವೊಕೇಟ್ ಜನರಲ್: ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಮೀಸಲಾತಿ ನೀಡುವುದಕ್ಕೆ ಸಂಬಂಧದ ಪ್ರಕ್ರಿಯೆ ಕುರಿತು ಸರ್ಕಾರ ವರದಿ ಸಲ್ಲಿಸಲಿದೆ. ಹೀಗಾಗಿ ತಡೆ ನೀಡಬಾರದು ಎಂದು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಈವರೆಗೂ ಕೈಗೊಂಡಿರುವ ಪ್ರಕ್ರಿಯೆ ಮುಂದುವರಿಸದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಅರ್ಜಿಯಲ್ಲಿ ಕೋರಿರುವುದೇನು?: ಈ ಅರ್ಜಿ ಸಂಬಂಧ ಡಿ.27ರಂದು ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, 2000ನೇ ಇಸವಿಯಲ್ಲಿ ಲಿಂಗಾಯತ ಸಮುದಾಯದ ಕೆಲವು ಉಪ ಪಂಗಡಗಳ ಮೀಸಲಾತಿ ಕೋರಿಕೆಯನ್ನು ತಿರಸ್ಕರಿಸಿ ಹಿಂದುಳಿದ ವರ್ಗಗಳ ಆಯೋಗವು ಕೆಲ ಶಿಫಾರಸುಗಳನ್ನು ಮಾಡಿತ್ತು. ಅದಾಗ್ಯೂ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿ ಆಧರಿಸಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರ ಮುಂದಾಗುತ್ತಿದೆ. ಆದರೆ, ವೀರಶೈವ/ಲಿಂಗಾಯತ ಸಮುದಾಯದ ಉಪ ಪಂಗಡವನ್ನು ತಾತ್ಕಾಲಿಕ ಪ್ರಕ್ರಿಯೆಯ ಮೂಲಕ ಪ್ರವರ್ಗಕ್ಕೆ 2ಎಗೆ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇತ್ತೀಚೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಘೋಷಿಸಲು ಅರ್ಜಿದಾರರು ಕೋರಿದ್ದರು.
2ಡಿ, 3ಬಿ ಪ್ರವರ್ಗ ಹಂಚಿಕೆ ಪ್ರಶ್ನಿಸಿಲ್ಲ: ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ಪರ ವಕೀಲ ಮಂಜುನಾಥ್ ಅವರು ಈಟಿವಿ ಭಾರತ್‌ಗೆ ಪ್ರತಿಕ್ರಿಯಿಸಿ, ಸರ್ಕಾರ ಮೀಸಲಾತಿ ನೀಡುವ ಸಂಬಂಧ ಪಂಚಮಸಾಲಿ ಲಿಂಗಾಯತರಿಗೆ 2ಡಿ, ಒಕ್ಕಲಿಗರಿಗೆ 2ಸಿ ಪ್ರವರ್ಗಗಳನ್ನು ವಿಂಗಡಿಸುವ ಕುರಿತು ಈ ವರೆಗೂ ಸರ್ಕಾರದಿಂದ ಅಧಿಸೂಚನೆ ಹೊರ ಬಂದಿಲ್ಲ. ಈ ಅಂಶವನ್ನು ಅರ್ಜಿಯಲ್ಲಿ ಪ್ರಶ್ನಿಸಿಲ್ಲ ಎಂದು ವಿವರಿಸಿದರು.
ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರ ಏನು?: ಎರಡು ವಾರಗಳ ಹಿಂದಷ್ಟೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಗಳಿಗೆ 2C ಹಾಗೂ 2D ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿ ಘೋಷಣೆ ಮಾಡಿತ್ತು. 3A ನಲ್ಲಿರುವ ಒಕ್ಕಲಿಗರಿಗೆ 2C ಪ್ರವರ್ಗ ಸೃಷ್ಟಿಸಲಾಗಿದ್ದರೆ, 3B ಯಲ್ಲಿದ್ದ ಲಿಂಗಾಯಿತರಿಗೆ 2D ಕ್ಯಾಟಗರಿ ಸೃಷ್ಟಿಸಿ ತೀರ್ಮಾನ ಕೈಗೊಂಡಿತ್ತು. ಪಂಚಮಸಾಲಿಗರು ಕೇಳಿದ 2A ಮೀಸಲಾತಿಯನ್ನು ಸರ್ಕಾರ ನೀಡದಿರಲು ನಿರ್ಧರಿಸಿತ್ತು. ಅದರ ಬದಲಿಗೆ ಪಂಚಮಸಾಲಿ ಸೇರಿ ವೀರಶೈವ ಲಿಂಗಾಯತರಿಗೆ 2D ಪ್ರತ್ಯೇಕ ಪ್ರವರ್ಗ ಸೃಷ್ಟಿಸಲು ಉದ್ದೇಶಿಸಿತ್ತು. ಎಷ್ಟು ಪ್ರಮಾಣದಲ್ಲಿ ಮೀಸಲಾತಿ ನೀಡಬೇಕು ಎಂಬ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ನಿರ್ಧಾರ ಮಾಡಲು ಸಂಪುಟ ತೀರ್ಮಾನ ಮಾಡಿತ್ತು.
ಸರ್ಕಾರ ನೀಡಿರುವ ಮೀಸಲಾತಿ ಗೊಂದಲ ಉಂಟುಮಾಡಿದೆ. ನಮಗೆ 2ಎ ಮೀಸಲಾತಿಯೇ ಬೇಕು ಎಂದು ಒತ್ತಾಯಿಸಿ ಮತ್ತೆ ಜ. 12ರವರೆಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಗಡುವು ನೀಡಿದ್ದಾರೆ. 12ರ ಒಳಗೆ ಸಂಪೂರ್ಣ 2ಎ ಮೀಸಲಾತಿ ಪ್ರಕಟಿಸಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಇಲ್ಲವಾದಲ್ಲಿ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ.. ಜ.13ಕ್ಕೆ ಸಿಎಂ ಮನೆಗೆ ಮುತ್ತಿಗೆ: ವಿಜಯಾನಂದ ಕಾಶಪ್ಪನವರ