ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿ ಹೃಷಿಕೇಶ್ ಡೇವಿಡ್ಕರ್ಗೆ ಡೀಫಾಲ್ಟ್ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಹಾರಾಷ್ಟ್ರ ಮೂಲದ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ ಜಾಮೀನು ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ವಿಚಾರಣೆ ವೇಳೆ, ಅರ್ಜಿದಾರರನ್ನು ಬಂಧಿಸಿ 90 ದಿನ ಕಳೆದಿದೆ. ಈವರೆಗೂ ಆರೋಪಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ವಕೀಲರು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಘಟನೆ ಬಳಿಕ ಅರ್ಜಿದಾರರು ತಲೆಮರೆಸಿಕೊಂಡಿದ್ದರು. ಆರೋಪಿಯ ಬಂಧನಕ್ಕೂ ಮುನ್ನವೇ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಡೀಫಾಲ್ಟ್ ಜಾಮೀನು ನೀಡುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ ಜಾಮೀನು ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರಾದ ಹೃಷಿಕೇಶ್ ಅವರು ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ 18ನೇ ಆರೋಪಿಯಾಗಿದ್ದರು. ಈ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಜೊತೆಗೆ, ಕೋಕಾ ಕಾಯಿದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.
ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಆರೋಪಿ ತನ್ನನ್ನು 2020ರ ಜನವರಿಯಲ್ಲಿ ಬಂಧಿಸಿದ್ದು, ಈಗಾಗಲೇ 90 ದಿನ ಕಳೆದಿದ್ದು, ಡೀಫಾಲ್ಟ್ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಗೆ ಬಳಸಿದ್ದ ಬೈಕ್ ಗುರುತಿಸಿದ ಮಾಲೀಕ