ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ಮಾಜಿ ಆಪ್ತ ವಿನಯ್ ಮೇಲೆ ಹಲ್ಲೆ ನಡೆಸಿದ ಮತ್ತು ಅಪಹರಣ ಮಾಡಿದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ ದೂರಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಕೈಗೊಂಡಿರುವ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಕೋರಿ ಎನ್. ಆರ್. ಸಂತೋಷ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾ. ಎಚ್. ಪಿ.ಸಂದೇಶ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಸಂತೋಷ್ ಕೋರಿಕೆ ವಜಾ ಮಾಡಿ ಆದೇಶಿಸಿತು.
ಪ್ರಕರಣದ ಹಿನ್ನೆಲೆ :
ಈಶ್ವರಪ್ಪ ಆಪ್ತ ವಿನಯ್, ತನ್ನನ್ನು ಬಿಎಸ್ವೈ ಪಿಎ ಸಂತೋಷ್ ಮತ್ತು ಆತನ ಬೆಂಬಲಿಗರು ಅಪಹರಿಸಿ, ಕೊಲೆ ಮಾಡಲು ಯತ್ನಿಸಿದರು ಎಂದು ಆರೋಪಿಸಿ ಮಹಾಲಕ್ಷ್ಮೀಪುರ ಠಾಣೆ ಪೊಲೀಸರಿಗೆ 2017ರ ಮೇ 11ರಂದು ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕರಣದ ತನಿಖೆ ಪೂರ್ಣಗೊಳಿಸಿ ನಗರದ 7 ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ದೋಷಾರೋಪ ಪಟ್ಟಿಯಲ್ಲಿ ಎನ್. ಆರ್. ಸಂತೋಷ್ ಪ್ರಮುಖ ಆರೋಪಿಯಾಗಿದ್ದರು. ಈ ಹಿನ್ನೆಲೆ ಎಫ್ಐಆರ್ ಹಾಗೂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಲು ಕೋರಿ ಸಂತೋಷ್ 2019ರ ಮಾರ್ಚ್ 25 ರಂದು ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಅಂತಿಮವಾಗಿ ಪ್ರಕರಣ ವಿಚಾರಣೆಗೆ ಅರ್ಹ ಎನ್ನಿಸಿದ ಹಿನ್ನೆಲೆ ಸಂತೋಷ್ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ.