ಬೆಂಗಳೂರು: ದುಡ್ಡಿನ ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಆತನ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಗರದ ಎನ್‌ಆರ್‌ಐ ಲೇಔಟ್‌ನ 2ನೇ ಹಂತದ ನಿವಾಸಿ ಎನ್. ಮಂಜುನಾಥ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಚ್.ಪಿ ಸಂದೇಶ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಪೀಠ ತನ್ನ ಆದೇಶದಲ್ಲಿ, ಆರೋಪಿ ವಿರುದ್ಧ ವ್ಯಕ್ತಿಯನ್ನು ಅಪಹರಿಸಿ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಮೊಬೈಲ್ ಮೂಲಕ ಹಲ್ಲೆಗೊಳಗಾದ ವ್ಯಕ್ತಿಯ ನಗ್ನ ಫೋಟೋಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪಗಳಿವೆ. ಘಟನೆ ಬಳಿಕ ಆರೋಪಿ ಅಮೆರಿಕಗೆ ತೆರಳಿದ್ದಾನೆ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಲು ಇದು ಅರ್ಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದೆ.
ಓದಿ: 136 ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದ ಸಾಧಕ.. ವಿಶ್ವದಾಖಲೆ ಬರೆಯುವ ತವಕ
ಪ್ರಕರಣದ ಹಿನ್ನೆಲೆ: 2021ರ ನವೆಂಬರ್ 13ರಂದು ಬೆಂಗಳೂರಿನ ಟಿ.ಸಿ ಪಾಳ್ಯ ನಿವಾಸಿ ಸುಜಾತ ಎಂಬುವರು ಕೆ.ಆರ್ ಪುರ ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿಯನ್ನು ಮಂಜುನಾಥ್ ಅಪಹರಿಸಿದ್ದಾನೆ. 2 ಲಕ್ಷ ರೂಪಾಯಿ ಹಣದ ವಿಚಾರವಾಗಿ ನನ್ನ ಪತಿಯ ಮೇಲೆ ಹಲ್ಲೆ ಮಾಡಿ, ಬಳಿಕ ಅವರ ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ ತೆಗೆದು ಸೋಷಿಯಲ್ ಮೀಡಿಯಾಗಳಲ್ಲಿ ಹಾಕಿದ್ದಾನೆ ಎಂದು ಆರೋಪಿಸಿದ್ದರು.
ದೂರಿನ ಮೇರೆಗೆ ಪೊಲೀಸರು ಮಂಜುನಾಥನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ