ಬೆಂಗಳೂರು : ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ ಒಂದು ಕೋಟಿ ರೂ. ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಆರೋಪಿ ಯುವರಾಜ್ ಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಆರೋಪಿ ಯುವರಾಜ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಕೆ.ನಟರಾಜನ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.
ಪೀಠ ತನ್ನ ಆದೇಶದಲ್ಲಿ ದೂರುದಾರ ಸುರೇಂದ್ರ ರೆಡ್ಡಿ ಅವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಆಮಿಷವೊಡ್ಡಿ ಒಂದು ಕೋಟಿ ರೂ. ಹಣ ಪಡೆದು ವಾಪಸ್ ಕೊಡದೆ ವಂಚಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಓದಿ : ಸಿಡಿ ಪ್ರಕರಣ.. ಎಸ್ಐಟಿ ರದ್ದು ಕೋರಿದ್ದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಅಲ್ಲದೆ, ವಂಚನೆ, ಅಪರಾಧಿಕ ಒಳಸಂಚು ಮತ್ತು ಜೀವ ಬೆದರಿಕೆ ಹಾಕಿರುವುದು ಸೇರಿದಂತೆ ಇನ್ನಿತರ ಅಪರಾಧ ಕೃತ್ಯಗಳ ಸಂಬಂಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿ ವಿರುದ್ಧ ಹಲವು ದೂರು ದಾಖಲಾಗಿದ್ದು, ಅವುಗಳ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.
ಪ್ರಕರಣ ಸಂಬಂಧ ಆರೋಪಿ ಯುವರಾಜ್ ಸ್ವಾಮಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಫೆ.8ರಂದು ನಗರದ 67ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಜಾಗೊಳಿಸಿ ಆದೇಶಿಸಿತ್ತು. ಈ ಹಿನ್ನೆಲೆ ಆರೋಪಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.