ಬೆಂಗಳೂರು : ಸರ್ಕಾರಿ ಉದ್ಯೋಗಿ ಎಂಬ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಬೆಸ್ಕಾಂ ಉದ್ಯೋಗಿಯ ಜಾಮೀನು ಅರ್ಜಿ ತಿರಸ್ಕರಿಸಿದೆ.
ಕೆಪಿಟಿಸಿಎಲ್ನಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ಆರೋಪಿ ಎಚ್.ಎನ್. ಶ್ರೀನಿವಾಸ ಮೂರ್ತಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ ಸಂದೇಶ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಅರ್ಜಿದಾರನ ವಿರುದ್ಧ ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪವಿದೆ. ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ನೀಡಿರುವ ಹೇಳಿಕೆ ಹಾಗೂ ವೈದ್ಯಕೀಯ ಸಾಕ್ಷ್ಯಗಳನ್ನು ಗಮನಿಸಿದರೆ ಆರೋಪಿ ಅತ್ಯಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿ ಸಂತ್ರಸ್ತೆಗೆ ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿರುವ ಮತ್ತು ಜೀವ ಬೆದರಿಕೆ ಹಾಕಿರುವ ಆರೋಪವಿದೆ. ಆದ್ದರಿಂದ ಆರೋಪಿ ಸರ್ಕಾರಿ ಉದ್ಯೋಗಿ ಎಂಬ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ಪೀಠ ತೀರ್ಪಿನಲ್ಲಿ ಹೇಳಿದೆ.
ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ವಾದಿಸಿ, ಸರ್ಕಾರಿ ಉದ್ಯೋಗಿ ಎಂಬ ಕಾರಣಕ್ಕೆ ಸುಳ್ಳು ದೂರು ದಾಖಲಿಸಲಾಗಿದೆ. ಅರ್ಜಿದಾರರು 2021ರ ನವೆಂಬರ್ 14ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಕೋರಿದ್ದರು. ಅರ್ಜಿದಾರರ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್ ಆರೋಪಿತನ ಮನವಿ ಪರಿಗಣಿಸದಂತೆ ಕೋರಿತ್ತು.
ಇದನ್ನೂ ಓದಿ: ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಕಾನ್ಸ್ಟೇಬಲ್ನಿಂದ ವಂಚನೆ ಆರೋಪ.. ಠಾಣೆ ಮುಂದೆ ಸಂತ್ರಸ್ತೆ ಧರಣಿ
ಸಂತ್ರಸ್ತೆ ಆರೋಪ:
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿರುವ ಸಂತ್ರಸ್ತೆ, 2021ರ ಸೆಪ್ಟೆಂಬರ್ 14ರಂದು ಆರೋಪಿ ಶ್ರೀನಿವಾಸ್ ಮೂರ್ತಿ ತನ್ನನ್ನು ಹೋಮ್ ಸ್ಟೇಯೊಂದಕ್ಕೆ ಕರೆದೊಯ್ದು ತನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ತನಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ಹೇಳಿದರೂ ಬಿಡಲಿಲ್ಲ. ಆ ಬಳಿಕ ಮದುವೆಯಾಗಿವುದಾಗಿ ಭರವಸೆ ನೀಡಿ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದರು.
ಇಲ್ಲೊಮ್ಮೆ ನೋಡಿ: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ