ಬೆಂಗಳೂರು: ರಾಜ್ಯದಲ್ಲಿ ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಿಕೊಂಡಿರುವ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ವರದಿ ನೀಡಿದರೂ ಒಪ್ಪದ ರಾಜ್ಯ ಪೊಲೀಸರು ಹೈಕೋರ್ಟ್ ಒತ್ತಡದ ಬಳಿಕ ಏಳು ಪ್ರಕರಣಗಳನ್ನು ದಾಖಲಿಸಿರುವ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದೆ.
ರಾಜ್ಯದಲ್ಲಿ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿದೆ ಎಂಬ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವರದಿ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಪಿಐಎಲ್ ಹಾಗೂ ಬಚಪನ್ ಬಚಾವೋ ಎನ್ ಜಿ ಒ ಸಂಸ್ಥೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರಿ ವಕೀಲರನ್ನು ಉದ್ದೇಶಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಖಾರವಾಗಿ ಪ್ರಶ್ನಿಸಿತು. ಹಾಗೆಯೇ, ಒಂದೇ ದಿನದಲ್ಲಿ ತನಿಖೆ ಮುಗಿಸಿ ವರದಿ ನೀಡಿರುವ ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಬೇಸರ ವ್ಯಕ್ತಪಡಿಸಿತು. ಬಳಿಕ ಕೇಂದ್ರದ ವರದಿ, ಹೈಕೋರ್ಟ್ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಎಫ್ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಬೇಜವಾಬ್ದಾರಿ ಪ್ರದರ್ಶಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸುವಂತೆ ಹಾಗೂ ತಪ್ಪಿತಸ್ಥ ಅಧಿಕಾರಿಗಳು ತಮ್ಮಿಂದಾಗಿರುವ ಪ್ರಮಾದ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿತು.
ಅಧಿಕಾರಿಗಳು ಈಗಾಗಲೇ ತಪ್ಪು ಮಾಡಿದ್ದಾರೆ. ಈ ತಪ್ಪು ಮರುಕಳಿಸಿದಂತೆ ನೋಡಿಕೊಳ್ಳುವ ಜವಾಬ್ದಾರಿ ವ್ಯವಸ್ಥೆ ಮೇಲಿದೆ ಎಂದು ಅಭಿಪ್ರಾಯಪಟ್ಟ ಪೀಠ, ಪೊಲೀಸರಿಗೆ ಸಿಆರ್ಪಿಸಿ ಅಥವಾ ಪೊಲೀಸರ ಕಾರ್ಯಾರಂಭದ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿತು. ಸಿಆರ್ಪಿಸಿ ಸೆಕ್ಷನ್ 154(1) ರಲ್ಲಿ ಯಾವುದೇ ಅಪರಾಧದ ಬಗ್ಗೆ ಸಿಗುವ ಯಾವುದೇ ರೀತಿಯ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಬಹುದು ಎಂದಿದೆ. ಇಷ್ಟು ಕೂಡ ಪೊಲೀಸರಿಗೆ ಅರ್ಥ ಆಗಿಲ್ಲವೇ ಎಂದು ಪ್ರಶ್ನಿಸಿತು. ಫೆ. 7 ಕ್ಕೆ ವಿಚಾರಣೆ ಮುಂದೂಡಿದ ಪೀಠ, ಅಷ್ಟರಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಿತು.
ಪ್ರಕರಣದ ಹಿನ್ನೆಲೆ: ರಾಜ್ಯದ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವಾಲಯ ವರದಿ ಮಾಡಿತ್ತು. ಈ ವಿಚಾರವಾಗಿ ಪಿಐಎಲ್ ದಾಖಲಿಸಿಕೊಂಡಿದ್ದ ಹೈಕೋರ್ಟ್ ತನಿಖೆ ನಡೆಸುವಂತೆ ರಾಜ್ಯ ಪೊಲೀಸರಿಗೆ ನಿರ್ದೇಶಿಸಿತ್ತು. ಅದರಂತೆ ಅಪರಾಧ ವಿಭಾಗದ ರಾಜ್ಯ ಪೊಲೀಸ್ ಮುಖ್ಯಸ್ಥರು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳೆದ ಡಿ.16 ರಂದು ಲಿಖಿತ ಸೂಚನೆ ನೀಡಿ, ತನಿಖೆ ನಡೆಸಲು ಆದೇಶಿದ್ದರು. ಈ ಸೂಚನೆಗೆ ಪ್ರತಿಕ್ರಿಯಿಸಿದ್ದ ರಾಜ್ಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಮಕ್ಕಳನ್ನು ಅಶ್ಲೀಲ ಚಿತ್ರಗಳಲ್ಲಿ ಬಳಸಿಕೊಂಡಿರುವ ಪ್ರಕರಣ ವರದಿ ಆಗಿಲ್ಲ ಎಂದು ಮೇಲಧಿಕಾರಿಗಳಿಗೆ ಲಿಖಿತವಾಗಿ ತಿಳಿಸಿದ್ದರು. ನಂತರವೂ ಹೈಕೋರ್ಟ್ ಒತ್ತಡಕ್ಕೆ ಸಿಲುಕಿದ್ದ ಪೊಲೀಸರು ಅಂತಿಮವಾಗಿ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಿದ್ದರು. ಪೊಲೀಸರ ಈ ಬೇಜವಾಬ್ದಾರಿ ನಡೆ ಸದ್ಯ ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ.