ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಲೆ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕಾಗಿ ಪಾಲಿಕೆ ಸಮರ್ಪಕ ತಂತ್ರಜ್ಞಾನ ಬಳಕೆ ಮಾಡಿಕೊಂಡಿಲ್ಲ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಸ್ತೆ ಗುಂಡಿಗಳ ಮುಚ್ಚುವ ಪ್ರಕ್ರಿಯೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿತು. ಜತೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಗುಂಡಿ ಮುಚ್ಚಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರವಾದ ಪ್ರಮಾಣಪತ್ರ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.
ಈ ನಡುವೆ ಬಿಬಿಎಂಪಿ ಪರ ವಕೀಲರು ಮಧ್ಯಪ್ರವೇಶಿಸಿ, ರಸ್ತೆ ಗುಂಡಿ ಮುಚ್ಚುವುದಕ್ಕಾಗಿ ಈವರೆಗೆ ಬಿಬಿಎಂಪಿ ಕೈಗೊಂಡ ವಿವರಗಳುಳ್ಳ ವರದಿಯನ್ನು ಸಲ್ಲಿಸಿದರು. ಅಲ್ಲದೆ, ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಓದಿ: ದಾವಣಗೆರೆ: ರಸ್ತೆ ಗುಂಡಿಗಳ ಸುತ್ತ ದೀಪ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ