ಬೆಂಗಳೂರು : ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ವಂಚನೆ ಪ್ರಕರಣದಲ್ಲಿನ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಯಾವುದೇ ಕ್ರಮ ಜರುಗಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದ್ದು, ಅದನ್ನು ಚಲಾಯಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಐಎಂಎ ವಂಚನೆ ಹಗರಣದ ತನಿಖೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಕೆಲ ಮಾಹಿತಿ ಕೇಳಲಾಗಿದೆ ಎಂದರು. ಜೊತೆಗೆ ಈ ಸಂಬಂಧ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಸಿದ್ದಪಡಿಸಿದ್ದ ಅನುಪಾಲನಾ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಎಲ್ಲ ಅಧಿಕಾರವಿದೆ. ಸಿಬಿಐ ವರದಿ ನೀಡುವವರೆಗೆ ಕಾಯುವ ಅಗತ್ಯವಿಲ್ಲ. ಸರ್ಕಾರ ವರದಿಗೆ ಕಾಯುತ್ತಾ ಕೂತರೆ ಆಸ್ತಿಯೇ ಇಲ್ಲವಾಗಬಹುದು. ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಪಿಐಡಿ ಕಾಯ್ದೆಯಡಿ ಆಸ್ತಿ ಮುಟ್ಟುಗೋಲಿಗೆ ತಕ್ಷಣವೇ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿ, ವಿಚಾರಣೆ ಮುಂದೂಡಿತು.