ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಹಾಡುವ ದಾಟಿ ಮತ್ತು ರಾಗ ಸಂಯೋಜನೆಗ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೃಷ್ಣಾ ದೀಕ್ಷಿತ್ ಅವರಿದ್ದ ನ್ಯಾಯಪೀಠ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಅಲ್ಲದೇ, ಯಾವ ಅಧಿಕಾರದಡಿ ಮತ್ತು ಯಾವ ನಿಯಮಗಳಡಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆ ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು 2013ರ ಜೂ.12ರಂದು ವಸಂತ ಕನಕಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ತೀರಾ ತದ್ವಿರುದ್ಧವಾಗಿದೆ. ಮೈಸೂರು ಅನಂತಸ್ವಾಮಿಯವರು ಪೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿಲ್ಲ ಎಂದು ಆ ಸಭೆಯಲ್ಲಿ ಚರ್ಚಿಸಲಾಗಿತ್ತು. ಡಾ. ಸಿ. ಅಶ್ವಥ್ ಅವರ ರಾಗ ಸಂಯೋಜನೆ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿಯವರು ಒಪ್ಪಿಕೊಂಡಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ನಾಡೋಜ ಚನ್ನವೀರ ಕಣವಿ ನೇತೃತ್ವದ ಸಮಿತಿಯ ಶಿಫಾರಸನ್ನು ಕಡೆಗಣಿಸಿದೆ. ಡಾ. ಸಿ. ಅಶ್ವಥ್ ಅವರ ರಾಗ ಸಂಯೋಜನೆಯನ್ನು ಸಮಿತಿ ಶಿಫಾರಸು ಮಾಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಮೈಸೂರು ಅನಂತಸ್ವಾಮಿಯವರು ಫೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲ. ಈ ಸಂಬಂಧ ಅರ್ಜಿದಾರರ ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ನಾಡಗೀತೆಯ ರಾಗ, ದಾಟಿ ಮತ್ತು ಸಮಯದ ಮಿತಿ ಕುರಿತು ರಾಜ್ಯ ಸರ್ಕಾರ ತರಾತುರಿಯಲ್ಲಿ ಆದೇಶ ಹೊರಡಿಸಿದೆ. ಹಾಗಾಗಿ, ಸೆಪ್ಟಂಬರ್ 25ರಂದು ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಸರ್ಕಾರದ ಆದೇಶ: ನಾಡಗೀತೆಯನ್ನು 2.30 ನಿಮಿಷಗಳಲ್ಲಿ ಹಾಡುವ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಜೊತೆಗೆ ಮೈಸೂರು ಅನಂತಸ್ವಾಮಿ ಅವರ ದಾಟಿ ಅಳವಡಿಸಿಕೊಂಡು ನಾಡಗೀತೆಯ ಪೂರ್ಣಪಾಠ ಬಳಸಬೇಕು ಹಾಗೂ ಯಾವುದೇ ಆಲಾಪವಿಲ್ಲದ, ಪುನರಾವರ್ತನೆ ಇಲ್ಲದೇ, ಎರಡು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಹಾಡುವಂತೆ ಸರ್ಕಾರ ಆದೇಶದಲ್ಲಿ ಈ ಮೊದಲು ತಿಳಿಸಿತ್ತು.
(ಓದಿ: 2.30 ನಿಮಿಷದಲ್ಲಿ ನಾಡಗೀತೆ ಹಾಡಲು ಅಧಿಕೃತ ಆದೇಶ ಹೊರಡಿಸಿದ ಸರ್ಕಾರ)