ಬೆಂಗಳೂರು : ಅಪರಾಧ ಚಟುವಟಿಕೆಯಲ್ಲಿ ನಿರತವಾಗಿರುವ ಆರೋಪದ ಮೇಲೆ ರೌಡಿಶೀಟರ್ ಅಶೋಕ ಅಲಿಯಾಸ್ ಅಶೋಕ್ ಪೈ ಅವರನ್ನು ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದೀಗ ಈ ಆದೇಶಕ್ಕೆ ಹೈಕೋರ್ಟ್ ಮಂಧ್ಯಂತರ ತಡೆಯಾಜ್ಞೆ ನೀಡಿದೆ. ಗಡಿಪಾರು ಆದೇಶ ರದ್ದುಪಡಿಸುವಂತೆ ಕೋರಿ ಅಶೋಕ ಪೈ (50) ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ನ್ಯಾಯಪೀಠ ಈ ಆದೇಶ ನೀಡಿದೆ.
ಅರ್ಜಿಯಲ್ಲಿ ಪ್ರತಿವಾದಿಗಳಾದ ಮಂಡ್ಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧದ ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಸಿ.ಎನ್.ರಾಜು ವಾದ ಮಂಡಿಸಿ, ಅಪರಾಧ ಚಟುವಟಿಕೆಗಳಲ್ಲಿ ನಿರತರಾಗಿರುವ ಬಗ್ಗೆ ಅಶೋಕ್ ಪೈ ವಿರುದ್ಧ ಮಂಡ್ಯ ಪೊಲೀಸ್ ವರಿಷ್ಠಧಿಕಾರಿ ಸಿದ್ಧಪಡಿಸಿರುವ ವರದಿಯಲ್ಲಿ ಸೂಕ್ತ ಸಾಕ್ಷ್ಯಧಾರಗಳಿಲ್ಲ. ಮೇಲಾಗಿ ಪೈ ಯಾವುದೇ ಅಪರಾಧ ಚಟುವಟಿಕೆಯಲ್ಲಿ ನಿರತರಾಗಿಲ್ಲ. ಗಡಿಪಾರು ಮಾಡುವ ಸಂಬಂಧ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದಾಗ ಜಿಲ್ಲಾಧಿಕಾರಿ ಮುಂದೆ ಅರ್ಜಿದಾರರು ಹಾಜರಾಗಿ ಅಗತ್ಯ ವಿವರಣೆ ಮತ್ತು ಸಾಕ್ಷ್ಯಗಳನ್ನು ಒದಗಿಸಿ ಆಕ್ಷೇಪಣೆ ಸಹಸಲ್ಲಿಸಿದ್ದಾರೆ. ಅದನ್ನೆಲ್ಲಾ ಕಡೆಗಣಿಸಿ ಮಾ.15ರಂದು ಜಿಲ್ಲಾಧಿಕಾರಿ ಗಡುಪಾರು ಆದೇಶ ಹೊರಡಿಸಿದ್ದರು.
ಪ್ರಕರಣದ ಹಿನ್ನೆಲೆ: ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅಶೋಕ್ ಪೈ ಅವರನ್ನು 2023ರ ಮಾ.15ರಿಂದ ಜು.15ರವರೆಗೆ ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಗಡಿಪಾರು ಆದೇಶ ರದ್ದುಪಡಿಸಬೇಕು ಎಂದು ಅಶೋಕ್ ಕೋರಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಗಡಿಪಾರು ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.
ಯೋಗೇಶ್ ಗೌಡರ್ ಹತ್ಯೆ ಪ್ರಕರಣ: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡರ್‌ಹತ್ಯೆ ಪ್ರಕರಣದಲ್ಲಿ 17ನೇ ಆರೋಪಿ ಶಿವಾನಂದ ಶ್ರೀಶೈಲ್ ಬಿರಾದರ್ ಮಾಫಿ ಸಾಕ್ಷಿಯಾಗಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಸೆಷನ್ಸ್ ಕೋರ್ಟ್ ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ವಿಜಯಪುರದ ಶಿವಾನಂದ ಶ್ರೀಶೈಲ್ ಬಿರಾದಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಪ್ರಕರಣದಲ್ಲಿ ಬಹುತೇಕ ಸಾಂದರ್ಭಿಕ ಸಾಕ್ಷಿಗಳಿರುವ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದರೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಅನುಕೂಲವಾಗಲಿದೆ. ಹಾಗಾಗಿ ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 306 ರಡಿ ಹೇಳಿಕೆ ದಾಖಲಿಸಲು ಅಪ್ರೂವರ್ ಆಗಲು ಅನುಮತಿ ನೀಡಬೇಕೆಂದು ಆರೋಪಿ ಮನವಿ ಮಾಡಿದ್ದರು. ಇದನ್ನು ನ್ಯಾಯಾಲಯ ಮಾನ್ಯ ಮಾಡಿ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ಸೂಚಿಸಿ ಆದೇಶಿಸಿದೆ.
ಪ್ರಕರಣದಲ್ಲಿ 17ನೇ ಅರೋಪಿಯಾಗಿರುವ ಶಿವಾನಂದ ಶ್ರೀಶೈಲ್ ಬಿರಾದರ್, ಕೊಲೆ ಮಾಡಿದ ಆರೋಪಿಗೆ ಪಿಸ್ತೂಲ್ ನೀಡಿದ್ದನೆಂದು ಆರೋಪಿಸಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಹಾಗಾಗಿ ಆರೋಪಿ ಶಿವಾನಂದ್ ತನಗೆ ಅಪ್ರೋವರ್ ಆಗಲು ಅನುಮತಿ ನೀಡಬೇಕೆಂದು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ,2022ರ ಜು.14ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ : ಅಪ್ರಾಪ್ತೆಯನ್ನು ವಿವಾಹವಾಗಿ ಸಮ್ಮತಿಯ ಲೈಂಗಿಕ ಸಂಪರ್ಕ: ಜಾಮೀನು ನಿರಾಕರಿಸಿದ ಹೈಕೋರ್ಟ್