ಬೆಂಗಳೂರು: ಸರ್ಕಾರಿ ಭೂಮಿ ಕಬಳಿಸುವುದನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ- 2011ರ ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸುಮಾರು 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿ ವಿಶೇಷ ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡಿರುವುದನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಅರ್ಜಿದಾರರು ಮಾಡಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯ ಸಂವಿಧಾನ ಬದ್ಧತೆಯನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ಭೂ ಕಬಳಿಕೆ ಪ್ರಕರಣಗಳಲ್ಲಿನ ಸಾಕ್ಷ್ಯ ಪರಿಗಣಿಸುವುದಕ್ಕೆ ಕಾಯ್ದೆಯಡಿ ಸ್ಥಾಪನೆಯಾಗಿರುವ ವಿಶೇಷ ಕೋರ್ಟ್ಗೆ ಅವಕಾಶ ನೀಡಿದೆ. ಹಾಗೆಯೇ ವಿಶೇಷ ನ್ಯಾಯಾಲಯವು ಸಾಧ್ಯವಾದಷ್ಟು ಪ್ರಕರಣಗಳ ಅಗತ್ಯತೆಗಳನ್ನು ಆಧರಿಸಿ ವಾರಂಟ್ ಹೊರಡಿಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದೆ.
ಓದಿ: ನಮ್ಮ ಮಠ ಕಿಂಗ್ ಮೇಕರ್ ಆಗುತ್ತದೆಯೇ ಹೊರತು ಕಿಂಗ್ ಆಗಲ್ಲ: ಕಾಗಿನೆಲೆ ನಿರಂಜನಾನಂದಪುರಿ ಶ್ರೀ
ಸರ್ಕಾರಿ ಜಮೀನು ಒತ್ತುವರಿ ಮತ್ತು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ ವೇಳೆ ಮುಂದುವರಿಸಿದೆ. ಭೂ ಕಬಳಿಕೆ ನಿಷೇಧ ಕೋರ್ಟ್ ತೀರ್ಮಾನಿಸುವವರೆಗೆ ತಡೆಯಾಜ್ಞೆ ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಜೊತೆಗೆ ಅಗತ್ಯವಿರುವ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯದ ಪೀಠಗಳ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.
ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಚಿಸಲಾಗಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಿ ರದ್ದುಗೊಳಿಸಬೇಕೆಂದು ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.