ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಜೊತೆಗೆ ಪ್ರಕರಣ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ. ಜೊತೆಗೆ, ಡಿ ಕೆ ಶಿವಕುಮಾರ್ ವಿರುದ್ಧದ ಆರೋಪ ಸಂಬಂಧ ತನಿಖೆ ನಡೆದು ಸತ್ಯಾಂಶ ಹೊರಬರಬೇಕಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಅರ್ಜಿದಾರರ ವಿರುದ್ಧದ ಆರೋಪಗಳ ಸಂಬಂಧ ನಡೆಯುತ್ತಿರುವ ತನಿಖೆ ಭಾಗಶಃ ಪೂರ್ಣಗೊಂಡಿದೆ. ಆರೋಪಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಸಾಕಷ್ಟು ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ. ಆರೋಪ ಪಟ್ಟಿ ಸಲ್ಲಿಸುವ ಹಂತಕ್ಕೆ ಬಂದಿದೆ. ಪ್ರಕರಣ ತನಿಖಾ ಹಂತದಲ್ಲಿರುವಾಗ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೊಳಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಅಲ್ಲದೆ, ಅರ್ಜಿದಾರರು ಎಫ್‌ಐಆರ್ ರದ್ದು ಕೋರಿ ನ್ಯಾಯಾಲಯದ ಮೆಟ್ಟಿಲೇರುವುದರಲ್ಲಿ ಸಾಕಷ್ಟು ವಿಳಂಬ ಮಾಡಿದ್ದಾರೆ. ಜೊತೆಗೆ, ಈ ಸಂದರ್ಭದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ. ಮುಂದಿನ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಲದೆ, ತನಿಖಾಧಿಕಾರಿಗಳು ಒಂದು ವೇಳೆ ಆರೋಪ ಪಟ್ಟಿ ಸಲ್ಲಿಸಿದಲ್ಲಿ ಅದನ್ನು ಪ್ರಶ್ನೆ ಮಾಡುವುದು ಮತ್ತು ಪ್ರಕರಣದಿಂದ ತನ್ನನ್ನು ಬಿಡುಗಡೆ ಮಾಡುವಂತೆ ಕೋರಲು ಅರ್ಜಿದಾರ ಶಿವಕುಮಾರ್ ಸಂಪೂರ್ಣ ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.
ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅವರಿಗೆ ವಿನಾಕಾರಣ ಕಿರುಕುಳ ನೀಡುವುದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ರಾಜಕೀಯ ದುರುದ್ದೇಶ ಅಡಗಿದೆ. ಅಲ್ಲದೆ, ಅರ್ಜಿದಾರರ ತಾಯಿಯ ಆದಾಯವನ್ನೂ ಸೇರಿ ಅಕ್ರಮ ಆಸ್ತಿ ಎಂಬುದಾಗಿ ತಿಳಿಸಿದ್ದು, ಅರ್ಜಿಯನ್ನು ವಜಾಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಕೋರಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂಬುದರ ಕುರಿತು ಆರೋಪಕ್ಕೆ ಸೀಮಿತರಾಗದೆ, ಅದನ್ನು ದೃಢವಾಗಿ ಉಲ್ಲೇಖಿಸಿ, ಸಾಬೀತುಪಡಿಸಬೇಕು. ಯಾರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಅವರ ಹೆಸರು ಉಲ್ಲೇಖಿಸಬೇಕು. ಅರ್ಜಿಯಲ್ಲಿ ಯಾರೊಬ್ಬರನ್ನೂ ಪಕ್ಷಕಾರರನ್ನಾಗಿ ಮಾಡಲಾಗಿಲ್ಲ. ರಾಜಕೀಯ ದುರುದ್ದೇಶ ಹೊಂದಲಾಗಿದೆ ಎಂಬ ಅಂಶವನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಯಾರ ಸೂಚನೆಯ ಮೇರೆಗೆ ಎಂಬುದನ್ನು ಉಲ್ಲೇಖಿಸಬೇಕು ಎಂದು ವಾದಿಸಿತ್ತು.
ಭ್ರಷ್ಟಾಚಾರ ನಿಷೇಧ ಕಾಯಿದೆಯ ಸೆಕ್ಷನ್ 13(1)(ಇ)ನಲ್ಲಿ ಸಾರ್ವಜನಿಕ ವ್ಯಕ್ತಿ, ಕುಟುಂಬ ಸದಸ್ಯರು ಮಾತ್ರವಲ್ಲದೇ ಬೇರೆ ಯಾರೇ ಅವರಿಗೆ ಸಂಬಂಧಿಸಿದವರು ಆಗಿರಬಹುದು. ಇಲ್ಲಿ ಮೂರನೇ ವ್ಯಕ್ತಿಯೂ ಆಗಿರಬಹುದು ಎಂದು ಹೇಳಲಾಗಿದೆ. ಆರೋಪಿ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಕುಟುಂಬ ಎಂದರೆ ಪತ್ನಿ, ಅವರನ್ನು ಆಧರಿಸಿರುವ ಕುಟುಂಬ ಎಂದರೆ ಸ್ವತಂತ್ರ ಆದಾಯ ಇಲ್ಲದ ಮಕ್ಕಳಾಗಿರುತ್ತಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಐಟಿ ದಾಳಿಯಲ್ಲಿ ಸಿಕ್ಕಿರುವುದು ಬಿಜೆಪಿ ಹಣ, ಬಿಜೆಪಿ ಭ್ರಷ್ಟಾಚಾರದ ಹಿಮಾಲಯ: ಡಿ.ಕೆ.ಶಿವಕುಮಾರ್
ಪ್ರಕರಣದ ಹಿನ್ನೆಲೆ ಏನು ? ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ 2022ರ ಜುಲೈನಲ್ಲಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆ ತಡೆಯಾಜ್ಞೆಯನ್ನು ಈವರೆಗೂ ವಿಸ್ತರಿಸಿಕೊಂಡು ಬರಲಾಗಿತ್ತು. ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆ ತೆರವಾದಂತಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ನ್ಯಾಯಪೀಠ ಕೆಲ ತಿಂಗಳ ಹಿಂದಷ್ಟೇ ವಜಾ ಮಾಡಿದ್ದನ್ನು ಸ್ಮರಿಸಬಹುದಾಗಿದೆ.