ಬೆಂಗಳೂರು: ಹೈಕಮಾಂಡ್ ಬುಲಾವ್ ಮೇರೆಗೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ವಿಸ್ತರಣೆ, ಪುನರ್ರಚನೆ ಕುರಿತು ಕೇಂದ್ರ ನಾಯಕರ ಜೊತೆಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ನವದೆಹಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ರಾಜ್ಯ ಬಿಜೆಪಿ ಪಾಳಯಕ್ಕೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ ನಡೆಸಿದರು.
ಒಂದು ಗಂಟೆ ಕಾಲ ನಡೆದ ಸಭೆಯಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಗಿದ್ದು, ಸಭೆಯಲ್ಲಿ ಯಾವೆಲ್ಲಾ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎನ್ನುವುದು ತಿಳಿದುಬಂದಿಲ್ಲ.
ಜನವರಿ 16 ಮತ್ತು 17 ರಂದು ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮೊದಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದು ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ನಾಯಕತ್ವ ಬದಲಾವಣೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅದರ ಬೆನ್ನಲ್ಲೇ ತರಾತುರಿಯಲ್ಲಿ ಸಿಎಂ ಬಿಎಸ್ವೈ ಜೊತೆ ಹೈಕಮಾಂಡ್ ಸಭೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಓದಿ: ಸಂಪುಟ ವಿಸ್ತರಣೆಯೋ-ಪುನಾರಚನೆಯೋ ಗೊತ್ತಿಲ್ಲ, ನಾನು ಮಾತ್ರ ಸಚಿವನಾಗಲ್ಲ: ಯತ್ನಾಳ್
ಸಚಿವ ಸಂಪುಟ ವಿಸ್ತರಣೆ, ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎನ್ನಲಾಗುತ್ತಿದ್ದರೂ ಬೇರೆ ರೀತಿಯ ವಿದ್ಯಮಾನಗಳು ನಡೆದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.