ಬೆಂಗಳೂರು: ಫುಟ್ಪಾತ್ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಅಳವಡಿಸಿರುವ ಟ್ರಾನ್ಸ್ಫಾರ್ಮರ್ಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸುವುದು ಸೇರಿದಂತೆ ಅವುಗಳಿಂದ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲೂ ಅಪಾಯವಾಗದಂತೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ಬೆಸ್ಕಾಂ ಎಂಡಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ನಿರ್ದೇಶಿಸಿದೆ.
ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಿರುವ ಅಪಾಯಕಾರಿ ಟ್ರಾನ್ಸ್ಫಾರ್ಮರ್ಗಳನ್ನು ತೆರವು ಮಾಡುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು.
ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲು ಸ್ಥಳೀಯ ಸಂಸ್ಥೆಗಳ ಅನುಮತಿ ಇಲ್ಲ ಎಂಬ ಬೆಸ್ಕಾಂ ವಾದ ಒಪ್ಪಿತವಲ್ಲ. ಟೆಲಿಗ್ರಾಫ್ ಕಾಯ್ದೆ ಸೆಕ್ಷನ್ 10ರ ಪ್ರಕಾರ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲು ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು. ಆದರೆ ಬೆಸ್ಕಾಂ ಬಿಬಿಎಂಪಿಯ ಅನುಮತಿ ಪಡೆಯದೆ ಪಾದಚಾರಿ ಮಾರ್ಗಗಳಲ್ಲಿ ಎಲ್ಲೆಂದರಲ್ಲಿ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಿದೆ. ಹಾಗಿದ್ದೂ ಅನುಮತಿ ಅಗತ್ಯವಿಲ್ಲ ಎನ್ನುವುದಾದರೆ ಈ ಬಗ್ಗೆ ಬೆಸ್ಕಾಂ ಎಂಡಿಯಿಂದಲೇ ವಿವರಣೆ ಸಹಿತ ಪ್ರಮಾಣಪತ್ರ ಕೇಳಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೇ, 6ರಿಂದ 7 ಅಡಿ ಎತ್ತರದಲ್ಲಿ ಅಪಾಯಕಾರಿ ರೀತಿಯಲ್ಲಿ ಅಳವಡಿಸಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸುವುದು ಸೇರಿದಂತೆ, ಅವುಗಳಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಬೆಸ್ಕಾಂ ಎಂಡಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಅಂಗನವಾಡಿ, ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿರುವ ವರದಿ ಕೇಳಿದ ಹೈಕೋರ್ಟ್