ಬೆಂಗಳೂರು: ಪುಲಕೇಶಿ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು 6 ಜನ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು ಪರಿಹಾರ ಕೋರಿ ಸಲ್ಲಿಸಿರುವ ಅರ್ಜಿ ಪರಿಗಣಿಸಿರುವ ಹೈಕೋರ್ಟ್ ಪೀಠ ಜುಲೈ 14ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಪೂರ್ವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರಾದ ಕಿರಣ್ ಕುಮಾರ್ ಪೀಠಕ್ಕೆ ಮಾಹಿತಿ ನೀಡಿ, ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ರ್ಪೂಣಗೊಳಿಸಿದ್ದು, ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಮೃತರ ಕುಟುಂಬಗಳಿಗೆ ಪರಿಹಾರ ಕಲ್ಪಿಸಬೇಕೆಂಬ ಅರ್ಜಿದಾರರ ಮತ್ತೊಂದು ಮನವಿ ಕುರಿತು ಮುಂದೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
2019ರ ಜುಲೈ 10ರಂದು ಪುಲಕೇಶಿನಗರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡವೊಂದು ಕುಸಿದು ಬಿದ್ದು, 6 ಜನ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ವಿಳಂಬ ಮಾಡಿದ್ದರು.
ಈ ಹಿನ್ನೆಲೆಯಲ್ಲಿ 2021ರ ಜನವರಿಯಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿರುವ ಅರ್ಜಿದಾರರು, ಪ್ರಕರಣವನ್ನು ತ್ವರಿತವಾಗಿ ತನಿಖೆ ಮಾಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಪೊಲೀಸರಿಗೆ ನಿರ್ದೇಶಿಸಬೇಕು. ಹಾಗೆಯೇ, ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ವಿತರಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.