ಬೆಂಗಳೂರು: ಚಿಕ್ಕಬಳ್ಳಾಪುರ ನಗರ ಸಮೀಪವಿರುವ ಅರೆಕೆರೆ ಗ್ರಾಮದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ 173 ಎಕರೆ ಗೋಮಾಳವನ್ನು ಕಬಳಿಸಲು ಆ ಜಾಗದಲ್ಲಿ ಅನಧಿಕೃತ ಚರ್ಚ್ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಭೂಮಿಯನ್ನು ಕಬಳಿಸಿ ಅದೇ ಜಾಗದಲ್ಲಿ ಚರ್ಚ್ ನಿರ್ಮಿಸುವ ಉದ್ದೇಶದಿಂದ ಗೋಮಾಳದಾದ್ಯಂತ ಶಿಲುಬೆಗಳನ್ನು ಸ್ಥಾಪಿಸಲಾಗಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ನಿವಾಸಿ ರಾಘವೇಂದ್ರ ಜೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರಾದ ಗುರುರಾಜ ಜೋಶಿ ಅವರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ತಹಶೀಲ್ದಾರ್‌ಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಇದೇ ಮಾದರಿ ಆರೋಪವಿರುವ ಗೌರಿಬಿದನೂರಿನ ಕಲ್ಲಿನಾಯಕನಹಳ್ಳಿಯ ಗೋಮಾಳಕ್ಕೆ ಸಂಬಂಧಿಸಿದ ಅರ್ಜಿಯೊಂದಿಗೆ ಈ ಅರ್ಜಿಯನ್ನೂ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.
ಪಿಐಎಲ್ ಸಾರಾಂಶ :
ಅರೆಕೆರೆ ಗ್ರಾಮದ ಸರ್ವೆ ನಂಬರ್ 10ರಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ 173 ಎಕರೆ ಗೋಮಾಳವನ್ನು ಕಬಳಿಸುವ ಹುನ್ನಾರ ನಡೆಯುತ್ತಿದೆ. ಈ ಉದ್ದೇಶದಿಂದ ಕೆಲವು ಕ್ರಿಶ್ಚಿಯನ್ ವ್ಯಕ್ತಿಗಳು ಅಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸ್ಥಳದಲ್ಲಿ 37 ಶಿಲುಬೆಗಳನ್ನೂ ಸ್ಥಾಪಿಸಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಜೂ. 2ರಂದು ಲಿಖಿತ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ. ಹೀಗಾಗಿ, ಗೋಮಾಳ ಭೂಮಿ ಸಂರಕ್ಷಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.