ಬೆಂಗಳೂರ : ಇತಿಹಾಸ ಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೈಗೊಂಡಿರುವ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ದೇವಸ್ಥಾನದಿಂದ ನೂರು ಮೀಟರ್ ವ್ಯಾಪ್ತಿಯೊಳಗಿನ ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಮಹೇಂದ್ರಗೌಡ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಅರ್ಜಿದಾರರ ಪರ ವಕೀಲೆ ವಿಜೇತಾ ಆರ್. ನಾಯಕ್ ಅವರು ವಾದಿಸಿ, ವಿಜಯನಗರ ಸಾಮ್ರಾಜ್ಯ ಕಾಲದ 1486ರಲ್ಲಿ ನಿರ್ಮಾಣವಾಗಿರುವ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಪುರಾತತ್ವ ಇಲಾಖೆ ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ.
ಪುರಾತತ್ವ ಸ್ಮಾರಕಗಳು ಮತ್ತು ಪ್ರಾಚ್ಯವಸ್ತು ಸ್ಥಳಗಳ ಸಂರಕ್ಷಣಾ ಕಾಯ್ದೆ ಪ್ರಕಾರ ಸಂರಕ್ಷಿತ ಸ್ಮಾರಕಗಳಿಂದ 100 ಮೀಟರ್ ಸುತ್ತಳತೆಯಲ್ಲಿ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಆದರೂ ನಿಯಮಾವಳಿ ಉಲ್ಲಂಘಿಸಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಪುರಾತತ್ವ ಇಲಾಖೆ ಶೋಕಾಸ್ ನೋಟಿಸ್ ನೀಡಿದ್ದರೂ ನಿರ್ಮಾಣ ಕಾಮಗಾರಿ ನಿಲ್ಲಿಸಿಲ್ಲ. ಆದ್ದರಿಂದ ಕಟ್ಟಡ ನಿರ್ಮಾಣ ಚಟುವಟಿಕೆ ತಡೆ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ವಾದ ಹಾಗೂ ಅರ್ಜಿದಾರರು ಸಲ್ಲಿಸಿದ ಫೋಟೋಗಳನ್ನು ಪುರಸ್ಕರಿಸಿದ ಪೀಠ, ಕಟ್ಟಡ ನಿರ್ಮಾಣ ಕಾಮಗಾರಿಗೆ ಮಧ್ಯಂತರ ತಡೆ ನೀಡಿ ಆದೇಶಿಸಿ, ಅರ್ಜಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿತು.